ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಹೈಕಮಾಂಡ್ಗೆ ಸಂದೇಶ ರವಾನಿಸಿದ್ದಾರೆಯೇ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್–ರಾಹುಲ್ ಗಾಂಧಿ ಭೇಟಿ ನಡೆಯುವ ಮೊದಲೇ, ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಚಿವರಾದ ಕೆ.ಜೆ. ಜಾರ್ಜ್ ಅವರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿರುವುದು ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಕೆ.ಜೆ. ಜಾರ್ಜ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ನಿರ್ದಿಷ್ಟ ಬಣಕ್ಕೆ ಸೇರದೆ, ಎಲ್ಲರೊಂದಿಗೂ ಉತ್ತಮ ಸಮನ್ವಯ ಹೊಂದಿರುವ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದೇ ಕಾರಣಕ್ಕೆ ಹೈಕಮಾಂಡ್ ಮಟ್ಟದಲ್ಲಿ ಅವರು ಅತ್ಯಂತ ಪ್ರಭಾವಶಾಲಿ ನಾಯಕರಾಗಿಯೇ ಗುರುತಿಸಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ, ಕೇರಳ ವಿಧಾನಸಭಾ ಚುನಾವಣೆಯಲ್ಲಿಯೂ ಅವರಿಗೆ ಪಕ್ಷದ ಪ್ರಮುಖ ಜವಾಬ್ದಾರಿಯನ್ನು ವಹಿಸಲಾಗಿದೆ ಎಂಬುದು ಅವರ ಪ್ರಾಮುಖ್ಯತೆಯನ್ನು ಇನ್ನಷ್ಟು ಸ್ಪಷ್ಟಪಡಿಸುತ್ತದೆ.
ಜಾರ್ಜ್–ರಾಹುಲ್ ಭೇಟಿ ಸಾಮಾನ್ಯ ಶಿಷ್ಟಾಚಾರ ಭೇಟಿ ಮಾತ್ರವಲ್ಲ, ರಾಜ್ಯದ ನಾಯಕತ್ವದ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ನಿಲುವು ಹಾಗೂ ಸಂದೇಶವನ್ನು ರಾಹುಲ್ ಗಾಂಧಿಗೆ ತಲುಪಿಸುವ ಪ್ರಯತ್ನವಾಗಿರಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ವಿಶೇಷವಾಗಿ ಡಿಕೆಶಿ–ರಾಹುಲ್ ಭೇಟಿಗೂ ಮುನ್ನ ಈ ಭೇಟಿಯಾಗಿರುವುದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.
ಆದರೆ, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಥವಾ ಸಚಿವ ಕೆ.ಜೆ. ಜಾರ್ಜ್ ಅವರಿಂದ ಯಾವುದೇ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ. ಆದರೂ, ಈ ಭೇಟಿ ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮಹತ್ವದ ತಿರುವು ನೀಡಬಹುದೇ? ನಾಯಕತ್ವ ಗೊಂದಲಕ್ಕೆ ಇದರಿಂದ ಪರಿಹಾರ ಸಿಗಬಹುದೇ? ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿವೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ನ ನಡೆ ಹಾಗೂ ಘೋಷಣೆಗಳು ಈ ಭೇಟಿಯ ನಿಜವಾದ ಅರ್ಥವನ್ನು ಬಹಿರಂಗಪಡಿಸುವ ನಿರೀಕ್ಷೆಯಿದೆ.








