77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ತೀವ್ರಗೊಳಿಸಲಾಗಿದೆ. ಜ.26ರಂದು ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಮುನ್ನ ದೆಹಲಿ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳು ಹೈ ಅಲರ್ಟ್ ಘೋಷಿಸಿದ್ದು, ನಗರಾದ್ಯಂತ ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ.
ಈ ಬಾರಿ ಮೊದಲ ಬಾರಿಗೆ ದೆಹಲಿ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಎಚ್ಚರಿಕೆ ಪೋಸ್ಟರ್‌ಗಳಲ್ಲಿ ಸ್ಥಳೀಯ ಭಯೋತ್ಪಾದಕನ ಚಿತ್ರವನ್ನು ಪ್ರಕಟಿಸಲಾಗಿದೆ. ಈ ವ್ಯಕ್ತಿಯನ್ನು ರೆಹಾನ್ ಎಂದು ಗುರುತಿಸಲಾಗಿದ್ದು, ಗಣರಾಜ್ಯೋತ್ಸವ ದಿನದಂದು ಭಯೋತ್ಪಾದಕ ದಾಳಿಯ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಎಚ್ಚರಿಕೆಗಾಗಿ ಆತನ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ತವ್ಯ ಪಥ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆ, ಅರೆಸೈನಿಕ ಸಿಬ್ಬಂದಿ, ಸ್ನಿಫರ್ ಡಾಗ್‌ಗಳು ಮತ್ತು ಡ್ರೋನ್ ನಿಗಾ ವ್ಯವಸ್ಥೆಗಳನ್ನು ನಿಯೋಜಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ವಾಹನ ತಪಾಸಣೆ ತೀವ್ರಗೊಳಿಸಲಾಗಿದ್ದು, ಸಂಶಯಾಸ್ಪದ ಚಲನವಲನಗಳ ಮೇಲೆ 24 ಗಂಟೆಯ ನಿಗಾ ವಹಿಸಲಾಗಿದೆ.
ಸಾರ್ವಜನಿಕರು ಅಪರಿಚಿತ ವ್ಯಕ್ತಿಗಳು ಅಥವಾ ಅನುಮಾನಾಸ್ಪದ ವಸ್ತುಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಯಾವುದೇ ಆತಂಕಕ್ಕೆ ಅವಕಾಶ ನೀಡದೇ ಶಾಂತವಾಗಿ ಗಣರಾಜ್ಯೋತ್ಸವ ಆಚರಿಸಲು ಎಲ್ಲಾ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.







