ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಕಳೆದ ಎರಡೂವರೆ ವರ್ಷಗಳಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಶೂನ್ಯ ಸಾಧನೆ ಮಾಡಿದ್ದು, ರಾಜ್ಯವನ್ನು ಆರ್ಥಿಕ ದಿವಾಳಿತನಕ್ಕೆ ತಳ್ಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಅಭಿವೃದ್ಧಿ ಕುಂಠಿತ ಹಾಗೂ ಆರ್ಥಿಕ ಅವ್ಯವಸ್ಥೆಯ ಕುರಿತು ಕಿಡಿಕಾರಿದರು. ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಇದ್ದರೂ ಸಹ ರಾಜ್ಯದ ಅಭಿವೃದ್ಧಿಗೆ ಬಿಡಿಗಾಸು ನೀಡಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.
ಉತ್ತರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ
ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾದಾಗ ಸಂತ್ರಸ್ತರಿಗೆ ಪರಿಹಾರ ನೀಡುವುದು ಹಾಗಿರಲಿ, ಕನಿಷ್ಠ ಪಕ್ಷ ಸಚಿವರು ಆ ಪ್ರದೇಶಗಳಿಗೆ ಭೇಟಿ ನೀಡಿ ಜನರ ಕಷ್ಟ ಆಲಿಸುವ ಸೌಜನ್ಯವನ್ನೂ ತೋರಿಲ್ಲ. ಇದುವರೆಗೂ ಯಾವುದೇ ಹೊಸ ಜನಪರ ಯೋಜನೆಯನ್ನು ಘೋಷಣೆ ಮಾಡದ ಈ ಸರ್ಕಾರ, ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ಮರೆತಿದೆ ಎಂದು ವಿಜಯೇಂದ್ರ ಆರೋಪಿಸಿದರು.
ಕುಡುಕರ ರಾಜ್ಯ ಮಾಡಲು ಸಂಚು
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ, ತನ್ನ ಬೊಕ್ಕಸ ತುಂಬಿಸಿಕೊಳ್ಳಲು ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಅಷ್ಟೇ ಅಲ್ಲದೆ, ದಿನಸಿ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡಲು ಅವಕಾಶ ನೀಡುವ ಮೂಲಕ ರಾಜ್ಯವನ್ನು ಕುಡುಕರ ರಾಜ್ಯವನ್ನಾಗಿ ಮಾಡಲು ಹೊರಟಿದೆ. ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಅಬಕಾರಿ ಇಲಾಖೆಯೊಂದಿಗೆ ಶಾಮೀಲಾಗಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದ್ದಾರೆ. ಇದು ರಾಜ್ಯದ ದುರ್ದೈವ ಮತ್ತು ಸರ್ಕಾರದ ನಿರ್ಲಜ್ಜತನದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮನೆ ಹಸ್ತಾಂತರ: ಇನ್ನೊಬ್ಬರ ಸಾಧನೆಗೆ ತಮ್ಮ ಹಣೆಪಟ್ಟಿ
ಇತ್ತೀಚೆಗೆ ನಡೆದ ಮನೆ ಹಸ್ತಾಂತರ ಕಾರ್ಯಕ್ರಮವು ಒಂದು ಕಪಟ ನಾಟಕವಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಮಂಜೂರಾದ ಯೋಜನೆ ಇದಾಗಿದ್ದು, ಬಿಜೆಪಿ ಮಹಾನಗರ ಪಾಲಿಕೆ ಅಧಿಕಾರದಲ್ಲಿದ್ದಾಗ ಸ್ಲಂ ಬೋರ್ಡ್ಗೆ 16 ಎಕರೆ ಜಾಗವನ್ನು ನೀಡಿತ್ತು. ಇದಕ್ಕೆ ಕೇಂದ್ರ ಸರ್ಕಾರ ಕೂಡ ಆರ್ಥಿಕ ನೆರವು ನೀಡಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರು ತಾವೇನೋ ಮಹಾನ್ ಸಾಧನೆ ಮಾಡಿದಂತೆ ಭಾಷಣ ಬಿಗಿಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಅಹಿಂದ ಹೆಸರಲ್ಲಿ ವಂಚನೆ, ಅಲ್ಪಸಂಖ್ಯಾತರ ಓಲೈಕೆ
ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರು ಈಗ ಹಿಂದೂ ಸಮಾಜವನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಕೇವಲ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವುದೇ ಇವರ ಏಕೈಕ ಗುರಿಯಾಗಿದೆ. ಕಾಂಗ್ರೆಸ್ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎಂಬ ತಾರತಮ್ಯದ ನೀತಿಯನ್ನು ಅನುಸರಿಸುತ್ತಿದೆ ಎಂದು ವಿಜಯೇಂದ್ರ ದೂರಿದರು.
ಪಾಕಿಸ್ತಾನದಲ್ಲಿದ್ದೀವಾ ಎಂಬ ಸಂಶಯ
ತರೀಕೆರೆಯಲ್ಲಿ ನನ್ನ ಭಾಷಣಕ್ಕೂ ಮುನ್ನವೇ ಪೊಲೀಸರು ನೋಟಿಸ್ ನೀಡಿದ್ದಾರೆ. ಇದನ್ನು ನೋಡಿದರೆ ನಾವು ಯಾವ ರಾಜ್ಯದಲ್ಲಿದ್ದೇವೆ? ನಾವೇನು ಭಾರತದಲ್ಲಿದ್ದೀವಾ ಅಥವಾ ಪಾಕಿಸ್ತಾನ, ಬಾಂಗ್ಲಾದೇಶದಲ್ಲಿದ್ದೀವಾ ಎಂಬ ಸಂಶಯ ಮೂಡುತ್ತಿದೆ. ದ್ವೇಷ ಭಾಷಣದ ಕಾಯ್ದೆಯನ್ನು ಮುಂದಿಟ್ಟುಕೊಂಡು ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಗೂಂಡಾಗಿರಿ ನಡೆಸುತ್ತಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ರಾಜ್ಯಪಾಲರ ಹುದ್ದೆಗೆ ಅಗೌರವ ತೋರಿದ್ದು ಕಾಂಗ್ರೆಸ್
ರಾಜ್ಯಪಾಲರ ವಿಚಾರದಲ್ಲಿ ಬಿಜೆಪಿ ವಿರುದ್ಧ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ. ಹಿಂದೆ ಗಾಂಧಿ ಕುಟುಂಬ ರಾಜ್ಯಪಾಲರನ್ನು ಹೇಗೆ ನಡೆಸಿಕೊಂಡಿತ್ತು ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಸಾಂವಿಧಾನಿಕ ಹುದ್ದೆಯಾದ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡ ಕುಖ್ಯಾತಿ ನಕಲಿ ಗಾಂಧಿ ಕುಟುಂಬಕ್ಕೆ ಸಲ್ಲುತ್ತದೆ ಎಂದು ತಿರುಗೇಟು ನೀಡಿದರು.
ಅಬಕಾರಿ ಇಲಾಖೆಯಲ್ಲಿನ ಕಾಳದಂಧೆ, ಮಟ್ಕಾ ದಂಧೆಕೋರರ ಲಂಚದ ಹಣದಲ್ಲಿ ಸರ್ಕಾರ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ವಿಜಯೇಂದ್ರ ಭವಿಷ್ಯ ನುಡಿದರು.








