ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಗಳು ಜೋರಾಗಿವೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನನಗೆ ಈವರೆಗೆ ಯಾವುದೇ ಕರೆ ಬಂದಿಲ್ಲ. ಆದರೆ ಹೈಕಮಾಂಡ್ನಿಂದ ಕರೆ ಬಂದರೆ ನಾನೂ ದೆಹಲಿಗೆ ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಕೆಲಸಗಳು ಸರಾಗವಾಗಿ ನಡೆಯುತ್ತಿದ್ದು, ಬಜೆಟ್ಗೆ ಸಂಬಂಧಿಸಿದ ಪೂರ್ವಸಿದ್ಧತಾ ಸಭೆಗಳು ಈಗಾಗಲೇ ನಿಗದಿಯಾಗಿವೆ ಎಂದು ಹೇಳಿದರು. ಇಂತಹ ಸಂದರ್ಭದಲ್ಲೂ ಹೈಕಮಾಂಡ್ ಸೂಚನೆ ನೀಡಿದರೆ ಅದಕ್ಕೆ ಆದ್ಯತೆ ನೀಡುವುದು ಸಹಜ ಎಂದು ಹೇಳಿದರು.
ಡಿಸಿಎಂ ಡಿಕೆ ಶಿವಕುಮಾರ್ ಅವರು ಬಜೆಟ್ ಪೂರ್ವಭಾವಿ ಸಭೆಗೆ ಗೈರಾಗಿರುವ ಕುರಿತು ಸ್ಪಷ್ಟನೆ ನೀಡಿದ ಸಿಎಂ, ಅವರು ಅನುಮತಿ ಪಡೆದುಕೊಂಡೇ ಸಭೆಗೆ ಹಾಜರಾಗದೆ ದೆಹಲಿಗೆ ತೆರಳಿದ್ದಾರೆ ಎಂದು ತಿಳಿಸಿದರು. ಅಲ್ಲದೆ, ಅಸ್ಸಾಂ ಚುನಾವಣೆಯ ಹಿನ್ನೆಲೆ ದೆಹಲಿಗೆ ತೆರಳುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಈ ಎಲ್ಲ ಬೆಳವಣಿಗೆಗಳ ನಡುವೆ, ಸಿಎಂ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೈಕಮಾಂಡ್ ಮಟ್ಟದಲ್ಲಿ ನಡೆಯುವ ನಿರ್ಧಾರಗಳ ಬಗ್ಗೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.








