ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರವೇ ಸುಮಾರು 5,327 ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಸಾವಿನ ಮಾಹಿತಿ ವ್ಯವಸ್ಥೆಯಲ್ಲಿ ನವೀಕರಿಸದ ಕಾರಣ ಹಣ ಜಮೆಯಾಗುತ್ತಲೇ ಇತ್ತು.
ಪ್ರತಿ ತಿಂಗಳು ₹2,000ರಂತೆ ಒಟ್ಟು 59,954 ಕಂತುಗಳ ಹಣ, ಅಂದರೆ ಸುಮಾರು ₹12 ಕೋಟಿ ಮೃತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವಿಷಯ ಬೆಳಕಿಗೆ ಬಂದ ನಂತರ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಈಗಾಗಲೇ ಜಮೆಯಾದ ಕೋಟ್ಯಂತರ ರೂಪಾಯಿ ಹಣವನ್ನು ಮರುಪಡೆಯಲು ಕ್ರಮ ಕೈಗೊಂಡಿದ್ದಾರೆ. ಮೃತ ಫಲಾನುಭವಿಗಳ ಖಾತೆಗೆ ಜಮೆಯಾದ ಹಣವನ್ನು ಸರ್ಕಾರದ ಖಾತೆಗೆ ಮರುಪಾವತಿಸಲು ಬ್ಯಾಂಕ್ಗಳಿಗೆ ಸೂಚನೆ ನೀಡಲಾಗಿದೆ.
ಈ ಪ್ರಕರಣದ ಹಿನ್ನೆಲೆ ಬೀದರ್ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರು ಪರಿಶೀಲಿಸುವ ಕಾರ್ಯ ಆರಂಭವಾಗಿದೆ. ಈ ಘಟನೆ ಸರ್ಕಾರದ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಮೇಲ್ವಿಚಾರಣೆ ಅಗತ್ಯವಿದೆ ಎಂಬ ಚರ್ಚೆಗೆ ಕಾರಣವಾಗಿದೆ.







