ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಸಮಸ್ಯೆಗಳು ಶಾಂತಿಯ ಮಾರ್ಗದಲ್ಲೇ ಪರಿಹಾರವಾಗಬೇಕು ಎಂದು ಒತ್ತಿ ಹೇಳಿದ್ದಾರೆ. ಹಾರ್ಮುಜ್ ಜಲಸಂಧಿ ಪ್ರದೇಶದ ಬಿಕ್ಕಟ್ಟು ಹಿನ್ನೆಲೆ, ಭಾರತವು ಇತರೆ ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಯುದ್ಧ ದೀರ್ಘಕಾಲ ಮುಂದುವರಿದರೆ ಸವಾಲುಗಳು ಎದುರಾಗುವ ಸಾಧ್ಯತೆ ಇರುವುದರಿಂದ, ಅದಕ್ಕೆ ತಕ್ಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಭಾರತವು ಪ್ರಸ್ತುತ 41 ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ವಿವರಿಸಿದ್ದು, ಇಂಧನ ಭದ್ರತೆಯನ್ನು ಖಚಿತಪಡಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.








