ಕ್ಲಿಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ಹೊಣೆಗೇಡಿತನ ಪ್ರದರ್ಶಿಸಬಾರದು : ಕುಮಾರಸ್ವಾಮಿ ಕಿಡಿ
ಬೆಂಗಳೂರು : ವೇತನ ತಾರತಮ್ಯ ಖಂಡಿಸಿ ಆಯುಷ್ ವೈದ್ಯರು ರಾಜೀನಾಮೆ ನೀಡುತ್ತಿರುವ ಬಗ್ಗೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಹೊಣೆಗೇಡಿತನ ಪ್ರದರ್ಶಿಸಬಾರದು. ಆಯುಷ್ ವೈದ್ಯ ವೇತನ ತಾರತಮ್ಯವನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ‘ವೇತನ ತಾರತಮ್ಯ ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯದ 2000 ಸರ್ಕಾರಿ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಅವರೊಂದಿಗೆ ಮಾತುಕತೆ ನಡೆಸಿ ಬಿಕ್ಕಟ್ಟು ಪರಿಹರಿಸುವಂತೆ ಒತ್ತಾಯಿಸುತ್ತೇನೆ’.
‘ಕರೋನಾ ನಿಯಂತ್ರಣ ಮತ್ತು ಚಿಕಿತ್ಸೆಗೆ ಆಯುಷ್ ವೈದ್ಯರಿಗೆ ಮಾಸಿಕ 20000 ರೂಪಾಯಿಗಳು. ಆಲೋಪತಿ ವೈದ್ಯರಿಗೆ ಮಾಸಿಕ 60000 ವೇತನ ನೀಡುತ್ತಿರುವುದು ತಾರತಮ್ಯ ಎಂದು ಆಯುಷ್ ವೈದ್ಯರು ರಾಜಿನಾಮೆ ನೀಡಿದ್ದಾರೆ. ಈಗಾಗಲೇ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಕೊರತೆ ಎದುರಿಸುತ್ತಿರುವ ರಾಜ್ಯ ಸರ್ಕಾರ ಆಯುಷ್ ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮನವೊಲಿಸಬೇಕು’.
‘ಯಾವುದೇ ಕಾರಣಕ್ಕೂ ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ಹೊಣೆ ಗೇಡಿತನ ಪ್ರದರ್ಶಿಸಬಾರದು. ಅಲೋಪತಿ ಮತ್ತು ಆಯುಷ್ ವೈದ್ಯರ ನಡುವಣ ಅಜಗಜಾಂತರ ವೇತನ ತಾರತಮ್ಯ ಸಹಜವಾಗಿಯೇ ಕಂದಕ ಸೃಷ್ಟಿಸಿದೆ. ಸರ್ಕಾರ ಕೂಡಲೇ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕರೋನ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಬಲು ಕಷ್ಟವಾಗುತ್ತದೆ’ ಎಂದು ಬರೆದುಕೊಂಡಿದ್ದಾರೆ.








