ಎಬೋಲಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಎಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯದಲ್ಲೂ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಆಫ್ರಿಕಾ ಖಂಡದ ಕಾಂಗೋ ಮತ್ತು ಉಗಾಂಡ ದೇಶಗಳಲ್ಲಿ ಎಬೋಲಾ ವೈರಸ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ, ಭಾರತದಲ್ಲೂ ಮುನ್ನೆಚ್ಚರಿಕಾ ಕ್ರಮಗಳಿಗೆ ಒತ್ತು ನೀಡಲಾಗಿದೆ. ಆದರೆ ಸದ್ಯಕ್ಕೆ ದೇಶದ ಯಾವುದೇ ಭಾಗದಲ್ಲೂ ಎಬೋಲಾ ಸೋಂಕು ಪತ್ತೆಯಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಇನ್ನೂ ವಿಶೇಷ ಸೂಚನೆ ಬಂದಿಲ್ಲ. ಆದರೆ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ಇಲಾಖೆ ಸಜ್ಜಾಗಿದೆ. ಅಗತ್ಯವಿದ್ದರೆ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಹೆಚ್ಚಿಸಲಾಗುತ್ತದೆ. ವಿಶೇಷವಾಗಿ ಆಫ್ರಿಕಾ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಬಹುದು, ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಎಬೋಲಾ ವೈರಸ್ ಸಾಮಾನ್ಯವಾಗಿ ಸೋಂಕಿತ ವ್ಯಕ್ತಿಯ ದೇಹದ ದ್ರವಗಳ ಸಂಪರ್ಕದಿಂದ ಹರಡುವ ಅಪಾಯಕಾರಿ ವೈರಸ್ ಆಗಿದ್ದು, ತೀವ್ರ ಜ್ವರ, ದೌರ್ಬಲ್ಯ, ವಾಂತಿ ಹಾಗೂ ರಕ್ತಸ್ರಾವದಂತಹ ಲಕ್ಷಣಗಳನ್ನು ಉಂಟುಮಾಡಬಹುದು. ವಿಶ್ವ ಆರೋಗ್ಯ ಸಂಸ್ಥೆಯೂ ಈ ವೈರಸ್ ಕುರಿತು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಕೂಡ ಮುನ್ನೆಚ್ಚರಿಕಾ ಕ್ರಮಗಳನ್ನು ಗಟ್ಟಿಗೊಳಿಸಿದೆ.
ಸದ್ಯ ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಹಾಗೂ ಆರೋಗ್ಯ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ಯಾವುದೇ ಅನುಮಾನಾಸ್ಪದ ಪ್ರಕರಣ ಕಂಡುಬಂದರೆ ತಕ್ಷಣ ವರದಿ ಮಾಡುವಂತೆ ಸೂಚಿಸಲಾಗಿದೆ.








