ರಾಜ್ಯ ಸರ್ಕಾರ ಕೆಲ ಪ್ರಕರಣಗಳನ್ನು ಹಿಂಪಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಮರ ಓಲೈಕೆ ಅತಿಯಾಗಿ ನಡೆಯುತ್ತಿದೆ ಎಂದು ಆರೋಪಿಸಿ ಸರ್ಕಾರದ ನಡೆಗೆ ಕಿಡಿಕಾರಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಮಾಜಿ ಸಂಸದರ ಮೇಲೆ ಕಲ್ಲು ತೂರಾಟ ನಡೆಸಿದವರು, KG ಹಳ್ಳಿ ಹಾಗೂ DJ ಹಳ್ಳಿ ಗಲಭೆಯಲ್ಲಿ ಭಾಗಿಯಾದವರು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರ ವಿರುದ್ಧದ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿದೆ ಎಂದು ಆರೋಪಿಸಿದರು.
ಇನ್ನು, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಲಾಡ್ಲೆ ಮಶಾಕ್’ ಪ್ರಕರಣವನ್ನೂ ಹಿಂಪಡೆಯಲಾಗಿದೆ ಎಂದು ಹೇಳಿದ ಅವರು, ಕಾನೂನು ಸುವ್ಯವಸ್ಥೆ ಹಾಳುಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಸರ್ಕಾರವೇ ಅವರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಈ ನಿರ್ಧಾರಗಳು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿವೆ ಎಂದು ಯತ್ನಾಳ್ ಟೀಕಿಸಿದ್ದು, ಕಾಂಗ್ರೆಸ್ ಸರ್ಕಾರ ಮತಬ್ಯಾಂಕ್ ರಾಜಕಾರಣಕ್ಕಾಗಿ ಇಂತಹ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.








