ರಾಜ್ಯದಲ್ಲಿ ಆತಂಕ ಮೂಡಿಸಿದ್ದ ಶಂಕಿತ ಎಬೋಲಾ ಪ್ರಕರಣದ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯಲ್ಲಿ ಎಬೋಲಾ ವೈರಸ್ಗೆ ಸಂಬಂಧಿಸಿದ ಕೆಲವು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮ ಕೈಗೊಂಡಿತ್ತು.
ಮಹಿಳೆಯನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿ, ಪ್ರತ್ಯೇಕ ನಿಗಾದಲ್ಲಿಟ್ಟು ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಬಳಿಕ ಅವರ ಸ್ಯಾಂಪಲ್ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಬಂದಿರುವ ವರದಿಯಲ್ಲಿ ಎಬೋಲಾ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ತಜ್ಞ ವೈದ್ಯರ ವರದಿ ಪ್ರಕಾರ ಮಹಿಳೆಗೆ ಎಬೋಲಾ ಸೋಂಕು ತಗುಲಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ಸಂಪೂರ್ಣ ಅಲರ್ಟ್ನಲ್ಲಿದೆ ಎಂದು ತಿಳಿಸಿದ್ದಾರೆ.








