ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆದಿದೆ. ಈ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ, ಡಿಕೆ ಶಿವಕುಮಾರ್ ಅವರು ಖಾಲಿ ಮಾಡಲಿರುವ KPCC ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಕ ಮಾಡಲಾಗುತ್ತದೆ ಎಂಬ ಕುತೂಹಲವೂ ಹೆಚ್ಚಾಗಿದೆ. ಈವರೆಗೂ ಸಚಿವ ಸತೀಶ್ ಜಾರಕಿಹೊಳಿ ಹೆಸರು ಈ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿಬರುತ್ತಿತ್ತು. ಉತ್ತರ ಕರ್ನಾಟಕದ ಪ್ರಭಾವಿ ನಾಯಕನಾಗಿರುವ ಜಾರಕಿಹೊಳಿ ಅವರಿಗೆ ಅವಕಾಶ ಸಿಗಬಹುದು ಎನ್ನಲಾಗುತ್ತಿತ್ತು.
ಆದರೆ, ಇದೀಗ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೆಸರು ದಿಢೀರ್ ಆಗಿ ಚರ್ಚೆಗೆ ಬಂದಿದೆ. OBC ಕೋಟಾದಡಿ ಪಕ್ಷದ ಸಮತೋಲನ ಕಾಪಾಡುವ ಉದ್ದೇಶದಿಂದ ಹರಿಪ್ರಸಾದ್ ಅವರಿಗೆ KPCC ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಒಟ್ಟಾರೆ, ಮುಖ್ಯಮಂತ್ರಿ ಆಯ್ಕೆ ಜೊತೆಗೆ KPCC ಅಧ್ಯಕ್ಷರ ಆಯ್ಕೆಯೂ ಕಾಂಗ್ರೆಸ್ ಒಳರಾಜಕೀಯದಲ್ಲಿ ಮಹತ್ವದ ತಿರುವು ಪಡೆದುಕೊಂಡಿದೆ.







