ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.
ಉನ್ನತ ಮಟ್ಟದ ತಜ್ಞರ ಸಮಿತಿ (HLCE) ನೀಡಿದ ಶಿಫಾರಸುಗಳ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೆ ಬಳಸಲಾಗುತ್ತಿದ್ದ ಪೆನ್ ಮತ್ತು ಪೇಪರ್ ವಿಧಾನವನ್ನು ಸಂಪೂರ್ಣವಾಗಿ ರದ್ದುಪಡಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇನ್ನು ಮುಂದೆ ಆನ್‌ಲೈನ್ ಮೂಲಕವೇ ಪರೀಕ್ಷೆ ಬರೆಯಬೇಕಾಗುತ್ತದೆ ಎಂದು NTA ಸ್ಪಷ್ಟಪಡಿಸಿದೆ.
ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳು ಹಾಗೂ ಪರೀಕ್ಷಾ ಪಾರದರ್ಶಕತೆ ಕುರಿತು ದೇಶಾದ್ಯಂತ ವ್ಯಕ್ತವಾಗಿದ್ದ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ತರಲಾಗಿದೆ ಎನ್ನಲಾಗಿದೆ. ಹೊಸ ವ್ಯವಸ್ಥೆಯಿಂದ ಪರೀಕ್ಷಾ ಪ್ರಕ್ರಿಯೆ ಹೆಚ್ಚು ಸುರಕ್ಷಿತ ಹಾಗೂ ಪಾರದರ್ಶಕವಾಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.








