ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳವನ್ನು ರಾಜಕೀಯ ವೇದಿಕೆಯನ್ನಾಗಿ ಮಾಡುವುದು ಸರಿಯಲ್ಲ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಲಾಗುವುದು ಎಂದು ಹೇಳಿದರು.
ಅಡ್ಡಮತದಾನದ ಆರೋಪದ ಕುರಿತು ಕಠಿಣ ನಿಲುವು ವ್ಯಕ್ತಪಡಿಸಿದ ಅಶೋಕ್, ಪಕ್ಷಕ್ಕೆ ಮೋಸ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪಕ್ಷದ ಶಿಸ್ತು ಉಲ್ಲಂಘಿಸಿ ದ್ರೋಹ ಬಗೆದವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. MLC ಚುನಾವಣೆಯಲ್ಲಿ ನಡೆದಿರುವ ಕ್ರಾಸ್ ವೋಟಿಂಗ್ ಕುರಿತು ಬಿಜೆಪಿ ಈಗಾಗಲೇ ಗಂಭೀರ ಪರಿಶೀಲನೆ ನಡೆಸುತ್ತಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಅಡ್ಡಮತದಾನದ ಆರೋಪವನ್ನು ಹೇಗೆ ನಿಭಾಯಿಸುತ್ತದೆ ಎಂಬುದರತ್ತ ರಾಜಕೀಯ ವಲಯದ ಗಮನ ಕೇಂದ್ರೀಕೃತವಾಗಿದೆ.







