ಬೆಂಗಳೂರು ನಗರದ ಫ್ರೀಡಂ ಪಾರ್ಕ್ನಲ್ಲಿ ಬಿಡದಿ ಟೌನ್ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವ ವಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ. ಶ್ರೀರಾಮುಲು, ಸಿ.ಟಿ. ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದಾರೆ.
ಬಿಡದಿ ಟೌನ್ಶಿಪ್ ಯೋಜನೆಯಿಂದ ರೈತರ ಜಮೀನುಗಳಿಗೆ ಅನ್ಯಾಯವಾಗುವ ಸಾಧ್ಯತೆ ಇದೆ ಎಂದು ಆರೋಪಿಸಿರುವ ಬಿಜೆಪಿ, ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಪ್ರತಿಭಟನೆಯ ವೇಳೆ ಸರ್ಕಾರದ ಭೂಸ್ವಾಧೀನ ನೀತಿ ವಿರುದ್ಧ ಘೋಷಣೆಗಳನ್ನು ಕೂಗಿ, ರೈತರ ಹಿತಾಸಕ್ತಿಯನ್ನು ಕಾಪಾಡುವಂತೆ ಒತ್ತಾಯಿಸಲಾಯಿತು.
ಇನ್ನೊಂದೆಡೆ, ರಾಜ್ಯ ಸರ್ಕಾರವು ರೈತರ ಇಚ್ಛೆಗೆ ವಿರುದ್ಧವಾಗಿ ಯಾವುದೇ ಜಮೀನನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ.







