ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಸಭಾಪತಿ ಸ್ಥಾನದಲ್ಲಿ ಮುಂದುವರಿಯಲು ನಡೆಸಿದ ಕೊನೆಯ ಹಂತದ ಪ್ರಯತ್ನಗಳು ಫಲಿಸದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಮಾಹಿತಿಯ ಪ್ರಕಾರ, ರಾಜೀನಾಮೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆದಿತ್ತು. ಕಾಂಗ್ರೆಸ್ ನಾಯಕತ್ವ ರಾಜೀನಾಮೆ ನೀಡುವಂತೆ ಸೂಚಿಸಿದ ಬಳಿಕ, ಹೊರಟ್ಟಿ ಈಗಾಗಲೇ ಸಿದ್ಧಪಡಿಸಿಕೊಂಡಿದ್ದ ರಾಜೀನಾಮೆ ಪತ್ರಕ್ಕೆ ದಿನಾಂಕ ಹಾಕಿ ಸಹಿ ಮಾಡಿ ಸಲ್ಲಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹೊರಟ್ಟಿ ಅವರು ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗೆ ಸಲ್ಲಿಸಲಾಗುವುದು. ಆಗಸ್ಟ್ 14ರಂದು ಉಪಸಭಾಪತಿ ಚುನಾವಣೆ ನಡೆಯಲಿದ್ದು, ಬಳಿಕ ಹೊಸ ಸಭಾಪತಿಯ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ರಾಜೀನಾಮೆ ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ, ನಾನು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ. ಯಾವುದೇ ಒತ್ತಡ ಇರಲಿಲ್ಲ. ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡುವಂತೆ ಕೇಳಿದ ಹಿನ್ನೆಲೆಯಲ್ಲಿ ಅದನ್ನು ಗೌರವಿಸಿ ಇಂದು ಸಲ್ಲಿಸಿದ್ದೇನೆ. ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗುವ ಪರಿಸ್ಥಿತಿ ಬಂದಿದ್ದರೆ, ಅದಕ್ಕೂ ಮುನ್ನವೇ ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದ್ದಾರೆ.
ಹೊರಟ್ಟಿ ಅವರ ರಾಜೀನಾಮೆಯೊಂದಿಗೆ ವಿಧಾನ ಪರಿಷತ್‌ನ ನೂತನ ಸಭಾಪತಿ ಯಾರು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಆಗಸ್ಟ್ 14ರ ನಂತರ ಹೊಸ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯುವ ನಿರೀಕ್ಷೆಯಿದೆ.








