ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿದೆ.
CWMA ನಿರ್ಧಾರದಂತೆ, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.
ದೆಹಲಿಯ CWMA ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರು ಹಂಚಿಕೆ ಕುರಿತು ಚರ್ಚೆ ನಡೆದಿದ್ದು, ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಭಾಗವಹಿಸಿದ್ದರು.
ರಾಜ್ಯಕ್ಕೆ ಮತ್ತೊಂದು ಸವಾಲು
ರಾಜ್ಯದಲ್ಲಿ ಮಳೆ ಪ್ರಮಾಣ, ಜಲಾಶಯಗಳ ನೀರಿನ ಸಂಗ್ರಹ ಹಾಗೂ ರೈತರ ಅಗತ್ಯಗಳ ಹಿನ್ನೆಲೆಯಲ್ಲಿ ಕರ್ನಾಟಕ ತನ್ನ ವಾದವನ್ನು ಮಂಡಿಸಿದರೂ, CWMA CWRC ಶಿಫಾರಸನ್ನೇ ಮುಂದುವರಿಸಿದೆ.
ಇದರಿಂದ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸುವುದು ಕರ್ನಾಟಕ ಸರ್ಕಾರದ ಮುಂದಿರುವ ಮತ್ತೊಂದು ಸವಾಲಾಗಿದೆ. ಈ ನಿರ್ಧಾರದ ಬೆನ್ನಲ್ಲೇ ರಾಜ್ಯದಲ್ಲಿ ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ರಾಜಕೀಯ ಹಾಗೂ ರೈತರ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆ ಇದೆ.








