ಮಂಡ್ಯ: ಎಲೆಕೆರೆಯ ಪಿ.ಎಂ. ಶ್ರೀ ಆದರ್ಶ ವಿದ್ಯಾಲಯದಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್, ಲರ್ನಿಂಗ್ ಮ್ಯಾಟರ್ಸ್ ಮತ್ತು ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಸಹಯೋಗದೊಂದಿಗೆ ‘ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನಾ ಸಮಾರಂಭ ಯಶಸ್ವಿಯಾಗಿ ಜರುಗಿತು.
ಸರ್ಕಾರಿ ಶಾಲಾ ಮಕ್ಕಳ ಕಲಿಕೆಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆಯನ್ನು ಉತ್ತೇಜಿಸುವ ಈ ಮಹತ್ವದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು, ‘ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯʼ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯದ ಲಾಭವನ್ನು ಎಲ್ಲ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಿ. ನೀವು ಯಾರಿಗಿಂತ ಕಮ್ಮಿ ಇಲ್ಲ ಎಂಬ ದೃಢ ವಿಶ್ವಾಸದಿಂದ ಮುನ್ನುಗ್ಗಿ. ಆಗ ಗೆಲುವು ನಿಮಗೆ ಸಿಗುತ್ತದೆ ಎಂದು ಶುಭ ಕೋರಿದರು.
ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳಿಗೂ ಆಧುನಿಕ ತಂತ್ರಜ್ಞಾನದ ಮೂಲಕ ಗುಣಮಟ್ಟದ ಇಂಗ್ಲಿಷ್ ಶಿಕ್ಷಣವನ್ನು ತಲುಪಿಸುವ ನಿಟ್ಟಿನಲ್ಲಿ ಈ ಪ್ರಯೋಗಾಲಯವು ಅತ್ಯಂತ ಉಪಯುಕ್ತವಾಗಲಿದೆ ಎಂದರು.
ಪುಟ್ಟಣ್ಣಯ್ಯ ಫೌಂಡೇಶನ್ ಸಿಇಒ ರಣಜಿತ್ ಎಚ್.ಎನ್. ಹಾಗೂ ರೋಟರಿ ಕ್ಲಬ್ ಪದಾಧಿಕಾರಿಗಳು, ನೂರಾರು ವಿದ್ಯಾರ್ಥಿಗಳು ಮತ್ತು ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಇಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು.







