ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯಲ್ಲಿ ಸಿಐಡಿ ಅಧಿಕಾರಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.ಸುಮಾರು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪದ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಮುಂದೆ, ಸುಹೇಲ್ ಸೇರಿದಂತೆ 6 ಅಭ್ಯರ್ಥಿಗಳು ಹಣ ನೀಡಿ ಅಕ್ರಮವಾಗಿ ಪರೀಕ್ಷೆ ಬರೆದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಒಂದು ಹುದ್ದೆಗೆ ₹40 ಲಕ್ಷ ಡೀಲ್?
ತನಿಖೆಯಲ್ಲಿ ಪ್ರತಿ ಹುದ್ದೆಗೆ ಸುಮಾರು ₹40 ಲಕ್ಷಕ್ಕೆ ಡೀಲ್ ನಡೆದಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ರಾಜಾಜಿನಗರದಲ್ಲಿದ್ದ ಕಚೇರಿಯೊಂದರಲ್ಲಿ ಈ ವ್ಯವಹಾರ ನಡೆದಿದ್ದು, ವಾಟ್ಸಾಪ್ ಮೂಲಕ ಸಂಪರ್ಕ ಸಾಧಿಸಿ ಮುಂಗಡವಾಗಿ ₹20 ಲಕ್ಷ ಪಾವತಿಸಲಾಗಿತ್ತು ಎಂದು ಸಿಐಡಿ ವಶದಲ್ಲಿರುವ ಅಭ್ಯರ್ಥಿ ಸುಹೇಲ್ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.
ರೆಸಾರ್ಟ್‌ಗಳಲ್ಲೇ ಪರೀಕ್ಷೆ ಬರೆದ ಆರೋಪ
ಈ ಪ್ರಕರಣದಲ್ಲಿ ಮತ್ತೊಂದು ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಸಾಮಾನ್ಯ ಪರೀಕ್ಷಾ ಕೇಂದ್ರಗಳ ಬದಲಾಗಿ ಕೆಲವು ಅಭ್ಯರ್ಥಿಗಳು ಬೆಂಗಳೂರಿನ ಖಾಸಗಿ ರೆಸಾರ್ಟ್, ತುಮಕೂರಿನ ದೇವರಾಯನದುರ್ಗ ಹಾಗೂ ಆಂಧ್ರಪ್ರದೇಶದ ರೆಸಾರ್ಟ್‌ಗಳಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ತನಿಖೆಯ ವೇಳೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಇದಲ್ಲದೆ, ಪರೀಕ್ಷೆ ಆರಂಭಕ್ಕೂ ಮುನ್ನವೇ ಅಭ್ಯರ್ಥಿಗಳ ಕೈಗೆ ಪ್ರಶ್ನೆಪತ್ರಿಕೆ ತಲುಪಿತ್ತು ಎಂಬ ಆರೋಪವೂ ತನಿಖೆಯಲ್ಲಿ ಮುನ್ನೆಲೆಗೆ ಬಂದಿದೆ.
ಈ ಎಲ್ಲ ಮಾಹಿತಿಗಳ ಆಧಾರದ ಮೇಲೆ ಸಿಐಡಿ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ನೇಮಕಾತಿ ಅಕ್ರಮದ ಹಿಂದೆ ಇರುವ ವ್ಯಕ್ತಿಗಳು ಮತ್ತು ಜಾಲದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.








