ಬೆಂಗಳೂರು : ಕೊರೊನಾ ವೈರಸ್ ಸೋಂಕು ದೃಢಪಟ್ಟ ಸೋಂಕಿತರ ಮನೆಗಳ ಬಳಿ ಆರೋಗ್ಯ ಇಲಾಖೆ ಸಿಬ್ಬಂದಿ ಎಚ್ಚರಿಕೆಯ ಫಲಕಗಳನ್ನು ಹಾಕುತ್ತಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಟ್ವಟ್ಟರ್ ನಲ್ಲಿ ಪ್ರತಿಕ್ರಿಯಿಸಿ, ಇದು ನವಯುಗದ ಸಾಮಾಜಿಕ ತಾರಮ್ಯ ಎಂದಿದ್ದಾರೆ.
ಕುಮಾರಸ್ವಾಮಿ ತಮ್ಮ ಟ್ವೀಟ್ ನಲ್ಲಿ.. ‘ಕೋವಿಡ್ 19 ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ, ‘ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸಬೇಕು. ಮನೆಯಿಂದ ಹೊರಬಾರದಂತೆ ಅವರ ಜವಾಬ್ದಾರಿ ತಿಳಿಸಿಕೊಡಬೇಕು. ಅದು ಬಿಟ್ಟು ಇಂಥ ಅಪಮಾನಿಸುವ ಪರಿಪಾಠ ಬೇಡ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಗಮನ ಹರಿಸಲಿ ಎಂದು ಆಗ್ರಹಿಸಿದ್ದಾರೆ.








