ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ನನ್ನದೊಂದೇ ಪ್ರಶ್ನೆ
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕುಮಾರಸ್ವಾಮಿ ಅವರು ಕೇಳಿರುವ ಹತ್ತು ಪ್ರಶ್ನೆಗಳಿಗೆ ನನ್ನದೊಂದು ನೇರ ಪ್ರಶ್ನೆಯಿದೆ. ಕೆಪಿಎಸ್ ಸಿ ಹುದ್ದೆಗಳನ್ನು ರದ್ದು ಮಾಡುವ ಅಧಿಕಾರ ಯಾರಿಗಿದೆ ಎಂಬುದು ಅವರಿಗೆ ತಿಳಿದಿದೆಯೇ? ಸಂವಿಧಾನಬದ್ಧ ಸಂಸ್ಥೆಯ ಕೆಲಸದಲ್ಲಿ ನಮ್ಮ ಹಸ್ತಕ್ಷೇಪ ಇರುವುದಿಲ್ಲ. ಈ ಹಿಂದೆ ಕೆಪಿಎಸ್ ಸಿಯಲ್ಲಿ ಅಕ್ರಮ ಎಸಗಿದವರ ಮೇಲೆ ನಾವು ಕಣ್ಣಿಟ್ಟಿದ್ದೇವೆ ಮತ್ತು ಈ ಬಾರಿಯ ಅಕ್ರಮಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಕಲಬುರಗಿಯಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನು ಗುಂಡಾಗಿರಿ ಎಂದು ಕರೆದ ಸಚಿವರು, ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಸವಾಲು ಹಾಕಿದರು. ಉದ್ಯಮಿಯೊಬ್ಬರ 22 ಸಾವಿರ ಕೋಟಿ ರೂಪಾಯಿ ಸಾಲವನ್ನು ಕೇವಲ 6 ಕೋಟಿ ರೂಪಾಯಿಗೆ ಸೆಟಲ್ ಮಾಡುವ ಕೇಂದ್ರ ಸರ್ಕಾರಕ್ಕೆ, ರೈತರಿಗೆ ಪರಿಹಾರ ನೀಡಲು ಮನಸ್ಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಕೆಪಿಎಸ್ ಸಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಪರೀಕ್ಷಾ ನಿಯಂತ್ರಕ ಹಾಗೂ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಐಡಿ ಪೊಲೀಸರು ಇವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಪರೀಕ್ಷೆಗೆ ಎರಡು ದಿನ ಮುಂಚಿತವಾಗಿಯೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರತಿ ಪತ್ರಿಕೆಗೆ 40 ಲಕ್ಷ ರೂಪಾಯಿಯವರೆಗೆ ಡೀಲ್ ನಡೆದಿದೆ ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಈಗಾಗಲೇ ಆರು ಮಂದಿ ಅಭ್ಯರ್ಥಿಗಳು ಹಣ ನೀಡಿ ಅಕ್ರಮ ಎಸಗಿರುವುದನ್ನು ಒಪ್ಪಿಕೊಂಡಿದ್ದು, ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅಕ್ರಮದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.








