ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದು, ಸತತ ಮೂರು ಗಂಟೆಗಳಿಗಿಂತ ಹೆಚ್ಚು ಶೋಧ ಕಾರ್ಯ ನಡೆಸಿದ್ದಾರೆ.ನಿನ್ನೆ ಬೆಳಗ್ಗೆ ಸುಮಾರು 7 ಗಂಟೆಗೆ ED ಅಧಿಕಾರಿಗಳು ಸಚಿವರ ನಿವಾಸಕ್ಕೆ ಆಗಮಿಸಿ ದಾಖಲೆಗಳು ಹಾಗೂ ವಿವಿಧ ಮಾಹಿತಿಗಳ ಪರಿಶೀಲನೆ ನಡೆಸಿದ್ದಾರೆ.
ದಾಳಿ ವೇಳೆ ಮನೆಯಲ್ಲೇ ಇದ್ದ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ವಿದೇಶಿ ವ್ಯವಹಾರ ಹಾಗೂ ಹೂಡಿಕೆಗಳಿಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ವಿದೇಶಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವ ED, ಸಚಿವರು ವಿದೇಶಿ ಕಂಪನಿಗಳಲ್ಲಿ ಮಾಡಿರುವ ಹೂಡಿಕೆ, ಕಂಪನಿಗಳ ಹಣಕಾಸು ವ್ಯವಹಾರ ಹಾಗೂ ಆದಾಯದ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ವಿದೇಶಿ ಹೂಡಿಕೆಗಳ ಕುರಿತು ಸ್ಪಷ್ಟನೆ
ಸಚಿವ ಜಾರಕಿಹೊಳಿ ಅವರು ಕೆಲವು ಕಂಪನಿಗಳಿಗೆ ಸಂಬಂಧಿಸಿದ ದಾಖಲೆಗಳು, ಹೂಡಿಕೆ ಮಾಡಿರುವ ಹಣದ ವಿವರ ಹಾಗೂ ಹಣಕಾಸು ವೆಚ್ಚದ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.
ವಿಶೇಷವಾಗಿ ದಕ್ಷಿಣ ಆಫ್ರಿಕಾದ ಕಂಪನಿ ಮತ್ತು ಗೋವಾದ ಕಂಪನಿ ಕುರಿತು ED ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ದಕ್ಷಿಣ ಆಫ್ರಿಕಾದ ವ್ಯಕ್ತಿಯೊಬ್ಬರು ಹಾಗೂ ತಮ್ಮ ಮಕ್ಕಳು ಸಂಬಂಧಿತ ಕಂಪನಿಯ ನಿರ್ದೇಶಕರಾಗಿದ್ದಾರೆ ಎಂದು ಸಚಿವರು ಅಧಿಕಾರಿಗಳಿಗೆ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.
ದಾಳಿ ಹಾಗೂ ವಿಚಾರಣೆ ಸಂದರ್ಭದಲ್ಲಿ ED ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ವಿದೇಶಿ ಹೂಡಿಕೆಗಳಿಗೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿಕೆ ಶಿವಕುಮಾರ್ ನಿವಾಸಕ್ಕೆ ಪ್ರಿಯಾಂಕ್ ಖರ್ಗೆ ಭೇಟಿ
ಇದೇ ವೇಳೆ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ED ದಾಳಿ ನಡೆದಿರುವ ಬೆಳವಣಿಗೆಯ ನಡುವೆಯೇ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ್ದಾರೆ.ಈ ವೇಳೆ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿ ಮೇಲೆ ನಡೆದಿರುವ ED ದಾಳಿ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.








