ಬೆಂಗಳೂರು: ನಿಗಧಿಯಂತೆ ಜುಲೈ 30, 31ರಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಸಲಾಗುವುದು. ಪರೀಕ್ಷಾ ದಿನಾಂಕ ವಿಚಾರದಲ್ಲಿ ಗೊಂದಲದ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜುಲೈ 30, 31 ರಂದು ಪ್ರತಿದಿನ ಎರಡು ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಆಗಸ್ಟ್.1ರಂದು ಹೊರನಾಡ ಕನ್ನಡಿರಿಗೆ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದ್ದಾರೆ.
ಆಗಸ್ಟ್ 9ಕ್ಕೆ ನಿಗಧಿಯಾಗಿದ್ದ ಡಿಪ್ಲೊಮಾ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಸಿಇಟಿ ಪರೀಕ್ಷೆಯನ್ನು ರಾಜ್ಯಾದ್ಯಂತ 127 ಸ್ಥಳಗಳಲ್ಲಿ 497 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲೇ ಸಿಇಟಿ ನಡೆಯಲಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಿದ ಮಾದರಿಯಲ್ಲೇ ಯಾವುದೇ ಗೊಂದಲವಿಲ್ಲದೆ ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದರು.
ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಅವಕಾಶ
ಕೋರೊನಾ ಪಾಸಿಟಿವ್ ಬಂದ ವಿದ್ಯಾರ್ಥಿಗಳಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ. ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳಿಗೆ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ. ಅಂಬ್ಯುಲೆನ್ಸ್ ಸೇರಿ ಎಲ್ಲಾ ತುರ್ತು ಅಗತ್ಯ ಸೇವೆ ಇರಲಿದೆ.
ಈಗಾಗಲೇ ಎಸ್‍ಒಪಿ ತಂಡಗಳನ್ನು ರಚಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಎರಡು ದಿನಗಳ ಮೊದಲೇ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಹೊರಗಡೆ ರಾಜ್ಯದಿಂದ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವಿನಾಯಿತಿ ನೀಡಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸಂಸ್ಥೆಗಳು ಸಹಕಾರ ನೀಡುತ್ತವೆ. ಎಲ್ಲಾ ಮಾರ್ಗಗಳಲ್ಲೂ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ ತಿಳಿಸಿದರು.








