ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಇಂದು ಉತ್ತಮ ಮಳೆಯಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ವರ್ಷಧಾರೆಯಾಗಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಕಳಸ, ಶೃಂಗೇರಿ, ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ಇನ್ನು ಭಾರಿ ಮಳೆಯಿಂದಾಗಿ ವಾಹನ ಸಂಚಾರದಲ್ಲಿ ಕೂಡ ಅಸ್ತವ್ಯಸ್ತ ಉಂಟಾಗಿದೆ. ಮಲೆನಾಡು ಭಾಗದಲ್ಲಿ ಕೆಲ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಹಾಗೂ ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.








