ಬೆಂಗಳೂರು : ಕೊರೊನಾ ಸಂಕಷ್ಟದ ನಡುವೆಯೂ ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಕೊರೋನಾ ಸಂಕಷ್ಟ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ, ವರ್ಷಾಚರಣೆಯ ಸಂಭ್ರಮದಲ್ಲೂ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತನ್ಮಯವಾಗಿರುವ ಬಿಜೆಪಿ ಸರ್ಕಾರ 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಉಡುಗೊರೆ ನೀಡುವ ಮೂಲಕ ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ.. ಸರ್ಕಾರ ಮಾತ್ರವಲ್ಲ, ಜನತೆಯು ಕೂಡ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವಾಗ ಬೊಕ್ಕಸ ಹಾಗೂ ಜನಸಾಮಾನ್ಯನ ಮೇಲೆ ಹೊರೆ ಹೇರುವ ಮೂಲಕ ‘ಶಾಸಕರಿಗೆ ಉಡುಗೊರೆ, ಜನತೆಗೆ ಬರೆ’ ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ ನಡವಳಿಕೆಯನ್ನು ಖಂಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
“ಬಿಜೆಪಿ ಸರ್ಕಾರಕ್ಕೆ ಸಾಮಾನ್ಯರ ಹಿತ ಮುಖ್ಯವೋ ಕುರ್ಚಿ ಉಳಿಸಿಕೊಳ್ಳಲು ಶಾಸಕರ ಹಿತ ಮುಖ್ಯವೋ ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ. ರಾಜ್ಯ ಎದುರಿಸುತ್ತಿರುವ ಇಂತಹ ಸಂಕಷ್ಟದ ಸಮಯದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಗಾದಿಯ ಮೇಲೆ ಸವಾರಿ ಮಾಡುವುದು ವಿಹಿತವೇ ಎಂಬುದನ್ನು ಶಾಸಕರು ಆತ್ಮಸಾಕ್ಷಿಗೆ ಪ್ರಶ್ನೆ ಮಾಡಿಕೊಳ್ಳಿ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕೊನೆಯ ಟ್ವೀಟ್ ನಲ್ಲಿ ಹಗಲನಿರುಳು ಮಾಡಿ, ಇರುಳ ಹಗಲ ಮಾಡಿ. ಆಚಾರವ ಅನಾಚಾರವ ಮಾಡಿ. ಅನಾಚಾರವ ಆಚಾರವ ಮಾಡಿ. ಭಕ್ತನ ಭವಿಯ ಮಾಡಿ, ಭವಿಯ ಭಕ್ತನ ಮಾಡಿ. ನುಡಿವವರ ಮಾತ ಕೇಳಲಾಗದು ಗುಹೇಶ್ವರಾ ಎಂದು ಅಲ್ಲಮನ ವಚನವನ್ನು ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.








