ಬೆಂಗಳೂರು: ಇಂದು ಹಾಗೂ ನಾಳೆ ಸಿಇಟಿ ಪರೀಕ್ಷೆ ನಡೆಯಲಿದ್ದು, ಆಗಸ್ಟ್ ಮಧ್ಯಂತರದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ನಂತರ ಮಾತನಾಡಿದ ಅವರು ಪರೀಕ್ಷೆ ಸುಸೂತ್ರವಾಗಿ ನಡೆಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಗಸ್ಟ್ ತಿಂಗಳ ಎರಡನೇ ವಾರದಲ್ಲೇ ಫಲಿತಾಂಶ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಆನ್‍ಲೈನ್ ಮೂಲಕವೇ ಸಿಇಟಿ ಕೌನ್ಸೆಲಿಂಗ್ ನಡೆಸಲಾಗುವುದು. ಸೆಪ್ಟೆಂಬರ್‍ನಲ್ಲಿ ಕಾಲೇಜುಗಳನ್ನು ಆರಂಭಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ಕೊರೊನಾ ಸಮಯದಲ್ಲಿ ಪರೀಕ್ಷೆ ನಡೆಸುವುದು ಸವಾಲಿನ ಕೆಲಸ. ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಒಂದು ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಪಾಡಲು 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಂಗಳೂರಿನಲ್ಲಿ 12 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇದ್ದು, ಅವರನ್ನು ಆಂಬ್ಯುಲೆನ್ಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಕರೆ ತಂದು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ. ಅವರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಬಳ್ಳಾರಿ ಹಾಗೂ ಮೈಸೂರಿನಲ್ಲಿ ತಲಾ ನಾಲ್ವರು ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದರು.