ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ಮಹಾಮಾರಿ ಕರ್ನಾಟಕಕ್ಕೂ ಕಾಲಿಟ್ಟಿರುವುದು ಇದೀಗ ದೃಢಪಟ್ಟಿದೆ. ಇದು ಸರ್ಕಾರ ಹಾಗೂ ರಾಜ್ಯದ ಜನತೆಯಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ವೈರಸ್ ಹರಡದಂತೆ ಕಟ್ಟೆಚ್ಚರ ವಹಿಸಿದ್ದು ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರು ಮೂಲದ ಸಾಫ್ಟ್ ವೇರ್ ಉದ್ಯೋಗಿಗೆ ಹೈದರಾಬಾದ್‍ನಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಈ ವೈರಸ್ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರ ವೈದ್ಯರಿಗೆ ಸೂಚನೆ ನೀಡಿದೆ.
ಈ ಸಂಬಂಧ ವೈದ್ಯರ ತುರ್ತು ಸಭೆ ಕರೆದ ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಹರಡದಂತೆ ಎಚ್ಚವಹಿಸಲು ವೈದ್ಯರಿಗೆ ಸೂಚನೆ ನೀಡಿದ್ದಾರೆ.
ಕೊರೊನಾ ಸೋಂಕು ಹರಡದಂತೆ ಜಿಲ್ಲಾ , ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದ್ದು. ಈ ಬಗ್ಗೆ ಆಸ್ಪತ್ರೆ ವೈದ್ಯಾಧಿಕಾರಿಗಳು ನಿಗಾ ವಹಿಸಿ, ದಿನದ 24 ಗಂಟೆಯೂ ಕೆಲಸ ನಿರ್ವಹಿಸುವಂತೆ ವೈದ್ಯರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಜ್ವರ, ಕೆಮ್ಮು ಎಂದು ಆಸ್ಪತ್ರೆಗೆ ಧಾವಿಸುವ ಯಾವ ಹೊರರೋಗಿಯನ್ನು ನಿರ್ಲಕ್ಷಿಸದೇ ಸೂಕ್ತ ತಪಾಸಣೆ ನಡೆಸಿ ಚಿಕಿತ್ಸೆ ನೀಡುವಂತೆ ಆದೇಶ ಹೊರಡಿಸಿದೆ.
ಈ ನಡುವೆ ರಾಜಧಾನಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಹುಬ್ಬಳ್ಳಿ, ಬೆಳಗಾವಿ, ಬೀದರ್, ಕಲಬುರಗಿ ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಆಗಮಿಸುವ ಹಾಗೂ ಹೊರಹೋಗುವ ಪ್ರಯಾಣಿಕರ ಮೇಲೆ ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ. ವಿಶೇಷವಾಗಿ ಚೀನಾದಿಂದ ಆಗಮಿಸುವ ಯಾವುದೇ ವ್ಯಕ್ತಿಗೆ ತಕ್ಷಣವೇ ಅವರನ್ನು ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸೂಚಿಸಿದ್ದಾರೆ.
ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆಗಾಗಿ ಪ್ರತ್ಯೇಕ ಸ್ಕ್ರೀನಿಂಗ್ ಗಳನ್ನು ಅಳವಡಿಸಿದ್ದು. ನುರಿತ ತಜ್ಞ ವೈದ್ಯರ ತಂಡ 24*7 ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಮಾನ ನಿಲ್ದಾಣದಂತೆ ರೈಲ್ವೆ ನಿಲ್ದಾಣಗಳಲ್ಲೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ರಾಜೀವ್‍ಗಾಂಧಿ ಆಸ್ಪತ್ರೆಯಲ್ಲಿ 15 ಹಾಸಿಗೆ, ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯಲ್ಲಿ 10 ಹಾಸಿಗೆವುಳ್ಳ ಪ್ರತ್ಯೇಕ ವಾರ್ಡ್ ಮೀಸಲಿಡಲಾಗಿದೆ. ಇದಲ್ಲದೆ ಬೆಂಗಳೂರಿನ ಜಯನಗರ ಜನರಲ್ ಆಸ್ಪತ್ರೆ ಮತ್ತು ಇಂದಿರಾನಗರದ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲೂ ತಲಾ 5 ಹಾಸಿಗೆಗಳ ಪ್ರತ್ಯೇಕ ವಾರ್ಡ್ ತೆರೆಯಲು ನಿರ್ಧರಿಸಲಾಗಿದೆ. ಜತೆಗೆ ಖಾಸಗಿ ಆಸ್ಪತ್ರೆಗಳಲ್ಲೂ ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡುವ ಬಗ್ಗೆ ಹೇಳುತ್ತಿದ್ದೆ, ಅಗತ್ಯವಾದ ಎಲ್ಲಾ ಔಷಧಿ ಹಾಗೂ ಪರಿಕರಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಒಟ್ಟಾರೆ, ಚೀನಾದಲ್ಲಿ ವ್ಯಾಪಕವಾಗಿ ಹರಡಿ ಅಲ್ಲಿನ ಸಾವಿರಾರು ಮಂದಿಯನ್ನು ಬಲಿ ತೆಗೆದುಕೊಂಡಿರುವ ಕೊರೊನಾ ವೈರಸ್ ಇದೀಗ ಕರ್ನಾಟಕಕ್ಕೆ ಕಾಲಿಟ್ಟಿರುವುದು ಸರ್ಕಾರಕ್ಕೆ ತಲೆನೋವು ತರಿಸುವ ಜೊತೆಗೆ ರಾಜ್ಯದ ಜನತೆಯ ನಿದ್ರೆಗೆಡಿಸಿದೆ. ಈ ಕೊರೊನಾ ವೈರಸ್ ಸೋಂಕು ತಡೆಯಲು ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದೆ.








