ದಕ್ಷಿಣ ಕನ್ನಡ : ಭಾರಿ ವರ್ಷಧಾರೆಗೆ ತತ್ತರಿಸಿ ಹೋಗಿರುವ ರಾಜ್ಯದಲ್ಲಿ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಚನ್ನಬಸವನಗೌಡ ಎಸ್.ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಭಾನುವಾರ ಕೊಡಗು ಮತ್ತು ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದ್ದರೂ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆ ಮುಂದುವರಿಯಲಿದೆ. ಅಲ್ಲದೇ ರಾಜ್ಯದ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ವಿವರಿಸಿದ್ದಾರೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಇನ್ನೆರಡು ದಿನ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








