ದಾವಣಗೆರೆ : ಬೆಂಗಳೂರಿನ ಕೆ.ಜಿ. ಹಳ್ಳಿ ಹಾಗೂ ಡಿ. ಜೆ. ಹಳ್ಳಿಯಲ್ಲಿ ನಡೆದ ಗಲಭೆ ಬಗ್ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹೊನ್ನಾಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಥಹ ದೊಂಬಿ, ಗಲಾಟೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಒತ್ತಾಯಿಸಬೇಕು. ವೋಟ್ ಬ್ಯಾಂಕ್ ರಾಜಕಾರಣ ಬಿಡಬೇಕು ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸಿಗರು ಮೌನ ಮುರಿದು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಬೇಕು. ಸಿದ್ದರಾಮಯ್ಯ ಮುಗ್ದರು ಎಂದಿದ್ದಾರೆ. ಹಾಗಿದ್ದರೆ ಗಲಾಟೆಗೆ ಪ್ರಚೋದನೆ ನೀಡಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.
ಎಸ್‌ಡಿಪಿಐ ಸಂಘಟನೆಯವರು ಹಿಂದೂ ದೇವತೆಗಳು ಮತ್ತು ಪ್ರಧಾನಿ ಬಗ್ಗೆ ಅವಹೇಳನಕಾರಿಯಾಗಿ, ಕೆಟ್ಟದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಾರೆ. ಇಂಥವರ ಬಗ್ಗೆ ಏನು ಹೇಳುತ್ತೀರಿ. ಮೊಹಮ್ಮದ್ ಪೈಗಂಬರ್ ಬಗ್ಗೆ ನಮಗೂ ಗೌರವವಿದೆ. ದೂರು ಕೊಡುವ ಬದಲು ಕಾನೂನು ಉಲ್ಲಂಘಿಸಿ ಗಲಾಟೆ ಮಾಡಿದರೆ ರಾಜ್ಯ ಸರ್ಕಾರ ಸಹಿಸುವುದಿಲ್ಲ. ತಕ್ಷಣವೇ ದೇಶದ್ರೋಹಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.








