ಕೆಲ ದಿನಗಳ ಹಿಂದೆಯೇ ನಟ ಶಿವರಾಜ್ ಕುಮಾರ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಮುಹೂರ್ತ ಫಿಕ್ಸ್ ಆಗಿತ್ತು. ಇತ್ತೀಚೆಗೆ ಸ್ಯಾಂಡಲ್ ವುಡ್ ನ ಜವಾಬ್ದಾರಿಯನ್ನು ಹೆಗಲಿಗೆ ಹೊತ್ತಿರುವ ಶಿವಣ್ಣ ಕೊರೊನಾ ಸಂಕಷ್ಟದ ಸಮಯದಲ್ಲಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಸಿಎಂ ಬಳಿ ಚರ್ಚೆ ಮಾಡುವವರಿದ್ದರು. ಆದರೆ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಈ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಸದ್ಯ ಬಿಎಸ್ ವೈ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಚಿತ್ರಂಗದ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿ ಮಾಡಿದ್ದರು.
ರೇಸ್ ಕೋರ್ಸ್ ನಲ್ಲಿರುವ ಡಿಸಿಎಂ ನಿವಾಸಕ್ಕೆ ತೆರಳಿದ ಶಿವರಾಜ್ ಕುಮಾರ್ ಅವರು ಕೆಲವು ಸಮಯ ಚಿತ್ರರಂಗದ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಭೆಯಲ್ಲಿ ಸಚಿವ ಸಿ.ಟಿ.ರವಿ, ಹಾಗೂ ಸ್ಯಾಂಡಲ್ ವುಡ್ ನ ಅನೇಕರು ಹಾಜರಿದ್ದರು. ಇದೀಗ ಶಿವಣ್ಣ ಅಶ್ವತ್ಥ್ ನಾರಾಯಣ ಅವರ ಜೊತೆ ಮಾತನಾಡಿ ಕೊರೊನಾ ಕಾರಣದಿಂದ ಸಂಕಷ್ಟಕ್ಕೊಳಗಾಗಿರುವ ಚಿತ್ರರಂಗದ ಪುನಶ್ಚೇತನಕ್ಕೆ ಸರ್ಕಾರದ ನೆರವಿಗೆ ಮನವಿ ಮಾಡಿದ್ದಾರೆ.








