ಬೆಂಗಳೂರು : ನಗರದ ಡಿಜೆ ಹಳ್ಳಿ ಗಲಭೆಯಿಂದ ಉಂಟಾಗಿರುವ ಆಸ್ತಿ-ಪಾಸ್ತಿಯ ನಷ್ಟವನ್ನು ಆರೋಪಿಗಳಿಂದಲೇ ವಸೂಲಿ ಮಾಡಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ ಕುರಿತಂತೆ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸದ್ಯ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲೇ ತನಿಖೆ ನಡೆಯುತ್ತಿದೆ. ಪೊಲೀಸ್ ಇಲಾಖೆಯೂ ಗಲಭೆಯ ತನಿಖೆ ಮಾಡ್ತಿದೆ. ತನಿಖೆ ಮುಗಿಯೋವರೆಗೂ ಬೇರೆ ತನಿಖೆ ನಡೆಸುವುದಿಲ್ಲ. ಸದ್ಯಕ್ಕೆ ಈ ಎರಡೂ ತನಿಖೆಗಳಿಗೆ ಸರ್ಕಾರ ಬದ್ಧವಾಗಿದೆ. ಸಿಬಿಐ, ಎನ್ ಐ ಎ ತನಿಖೆಯ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ತಿಳಿಸಿದರು.
ಇನ್ನೂ ಮುಂದುವರೆದು, ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡಲಾಗುತ್ತದೆ. ಆಸ್ತಿ ಪಾಸ್ತಿ ನಷ್ಟ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಎಜಿಯನ್ನು ಕರೆಸಿ ಮುಖ್ಯಮಂತ್ರಿಗಳು ಮಾಹಿತಿ ಪಡೆದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದನ್ವಯ ಆಸ್ತಿ ನಷ್ಟ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.








