ಬೆಳಗಾವಿ: ಶೀಘ್ರ ಎಲ್ಲ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಅತಿವೃಷ್ಟಿಗೆ ಸಂಬಂಧಿಸಿದಂತೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.
ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-19 ಇರುವುದರಿಂದ ಎನ್‍ಡಿಆರ್‍ಎಫ್ ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ.
ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಇದೆ. ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದರು.
ಇತರೆ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದೆ. ಮನೆ ಕಳೆದುಕೊಂಡಿರುವ ಬೆಳಗಾವಿಯ 44156 ಫಲಾನುಭವಿಗಳಿಗೆ 488 ಕೋಟಿ ಪರಿಹಾರ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿ-ಧಾರವಾಡ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.
ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.
ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ,ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಅವರು ಪ್ರವಾಹ ನಿರ್ವಹಣೆ ಮತ್ತು ಪರಿಹಾರ ಕ್ರಮಗಳ ಬಗ್ಗೆ ವಿವರ ನೀಡಿದರು.
ಶಾಸಕರಾದ ಮಹಾದೇವಪ್ಪ ಯಾದವಾಡ, ಕಳೆದ ಬಾರಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಹೇಶ್ ಕುಮಠಳ್ಳಿ, ಅಥಣಿ ಮತಕ್ಷೇತ್ರದಲ್ಲಿ ಬೆಳೆಹಾನಿ ಮತ್ತು ಮನೆ ಪರಿಹಾರ ಇನ್ನೂ ಪಾವತಿಸುವುದು ಬಾಕಿಯಿದೆ. ರಸ್ತೆಗಳು ಹಾಳಾಗಿರುವುದರಿಂದ ತುರ್ತಾಗಿ 50-60 ಕೋಟಿ ಬಿಡುಗಡೆಗೆ ಆಗ್ರಹಿಸಿದರು.
ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೆರೆಗಳು ಹಾಗೂ ಬಾಂದಾರಗಳು ಒಡೆದಿರುವುದರಿಂದ ಬೆಳೆ ಕೂಡ ಹಾನಿಯಾಗಿದೆ. ಆದ್ದರಿಂದ ಇವುಗಳ ಶಾಶ್ವತ ದುರಸ್ತಿಗೆ ಮತ್ತು ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.








