ಬೆಂಗಳೂರು: ರಾಜಧಾನಿ ಬೆಂಗಳೂರಿನ ಮೂಲಭೂತ ಸೌಕರ್ಯ ಹೆಚ್ಚಳ, ಸಮಗ್ರ ಅಭಿವೃದ್ಧಿ ನನ್ನ ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಆನಂದರಾವ್ ವೃತ್ತದ ಬಳಿ ನಾಮಕರಣಗೊಂಡಿರುವ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಮೇಲ್ಸೇತುವೆ ಉದ್ಘಾಟಿಸಿ ಮಾತನಾಡಿದ ಬಿಎಸ್‍ವೈ, ನಗರದಲ್ಲಿ ವಾಹನದಟ್ಟಣೆ ನಿವಾರಣೆಗೆ ಸರ್ಕಾರ ಕ್ರಮಕೈಗೊಂಡಿದೆ. ಆನಂದರಾವ್ ವೃತ್ತದಲ್ಲಿ ನಿರ್ಮಾಣವಾಗಿರುವ ಮೇಲ್ಸೇತುವೆ ವಾಹನ ಸಂಚಾರ ದಟ್ಟಣೆ ನಿವಾರಣೆಗೆ ಸಹಕಾರಿಯಾಗಲಿದೆ ಎಂದರು.
ಕೊರೊನಾ ಸಾಂಕ್ರಾಮಿಕ ರೋಗದ ನಡುವೆಯೂ ಜನಜೀವನವನ್ನು ಸಹಜ ಸ್ಥಿತಿಗೆ ತರಲಾಗುತ್ತಿದೆ. ಸೆಪ್ಟೆಂಬರ್ 1ರಿಂದ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸಂಚಾರ ಆರಂಭಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ನಗರದ ಮೂಲಸೌಕರ್ಯ ಸುಧಾರಣೆ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡುವುದು ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದಲೂ ಅಗತ್ಯ. ಬೆಂಗಳೂರು ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಹೇಳಿದ್ದಾರೆ.