ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರವಾಗಿ ಬೆಳಗಾವಿಯ ಪೀರನವಾಡಿ ಗ್ರಾಮ ಮತ್ತೆ ಉದ್ವಿಘ್ನಗೊಂಡಿದೆ.
ರಾತ್ರೋರಾತ್ರಿ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ನಂತರ ಶಿವಾಜಿ ಪ್ರತಿಮೆ ಸ್ಥಾಪನೆ ಅವಕಾಶ ನೀಡುವಂತೆ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕನ್ನಡಿಗರ ಮೇಲೆ ಶಿವಸೇನೆಯ ಕಿಡಿಗೇಡಿಗಳು ಜಪ್ಪಲಿ ಎಸೆದು ಕಲ್ಲು ತೂರಾಟ ನಡೆಸುತ್ತಿದ್ದಂತೆ ಸ್ಥಳದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ ಉದ್ರಿಕ್ತ ಶಿವಸೇನೆ ಕಾರ್ಯಕರ್ತರನ್ನು ಚದುರಿಸಿದರು. ಆದರೂ ಪೀರನವಾಡಿ ಗ್ರಾಮದಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಶಿವಾಜಿ ಪ್ರತಿಮೆ ಸ್ಥಾಪನೆಗೆ ಯತ್ನ..!
ಬೆಳಗಾವಿಯ ಪೀರನವಾಡಿ ಗ್ರಾಮದ ವೃತ್ತದಲ್ಲಿ ರಾಯಣ್ಣ ಪ್ರತಿಮೆ ಜಾಗದಲ್ಲಿ ಶಿವಸೇನೆ ಕಾರ್ಯಕರ್ತರು ಶಿವಾಜಿ ಪ್ರತಿಮೆ ಸ್ಥಾಪನೆ ಮುಂದಾಗಿದ್ದೇ ಗಲಾಟೆಗೆ ಕಾರಣವಾಗಿದೆ.
ಪೀರನವಾಡಿ ವೃತ್ತದಲ್ಲಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಯತ್ನಿಸುತ್ತಿದ್ದಂತೆ ಪೊಲೀಸರು ಮೂರ್ತಿಯನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಈ ವೇಳೆ ಕಿಡಿಗೇಡಿಗಳು ಕನ್ನಡಿಗರ ಮೇಲೆ ಚಪ್ಪಲಿ ಎಸೆದು, ಕಲ್ಲು ತೂರಾಟ ನಡೆಸಿದ್ದಾರೆ. ಹೀಗಾಗಿ ಗದ್ದಲ ಹೆಚ್ಚುತ್ತಿದ್ದಂತೆ ಪೊಲೀಸರು ಅನಿವಾರ್ಯವಾಗಿ ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.