ಬೆಳಗಾವಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಮುಂದಿನ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪನವರೇ ಮುಂದುವರಿಯಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯನ್ನೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರವಾಗಿ ಮಾತನಾಡಿದ ಅವರು, ವಿಜಯೇಂದ್ರ ಯುವನಾಯಕರು, ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ವಿಜಯೇಂದ್ರ ಅವರ ಮೇಲೆ ಬಂದಿರುವ ಆರೋಪಗಳು ಎಲ್ಲ ಸುಳ್ಳು. ಆರೋಪ ಮಾಡುವವರು ದಾಖಲೆಗಳಿದ್ದರೆ ಬಹಿರಂಗಪಡಿಸಲಿ. ವಿರೋಧಿಗಳು ಹತಾಶೆಯಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು.









