ಬೆಂಗಳೂರು : ದೇಶದ ಜಿಡಿಪಿ ಶೇಕಡಾ 23.9ರಷ್ಟು ಕುಸಿತ ಕಂಡಿರುವುದು ಆಘಾತಕಾರಿ ಬೆಳವಣಿಗೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಜಿಡಿಪಿ ಕುಸಿತ ಖಂಡಿಸಿ ಕೇಂದ್ರದ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ದೇಶದ ಜಿಡಿಪಿ ಶೇಕಡಾ 23.9ರಷ್ಟು ಕುಸಿತ ಕಂಡಿರುವುದು ಆಘಾತಕಾರಿ ಬೆಳವಣಿಗೆ ನಿಜ. ಆದರೆ ಈ ಕುಸಿತದ ಪೂರ್ಣ ಹೊಣೆಯನ್ನು ಕೊರೊನಾ ರೋಗದ ಮೇಲೆ ಹೇರುವ ಮೂಲಕ ಪ್ರಧಾನಿ ಮೋದಿ ಅವರು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಇನ್ನೂ ಹೆಚ್ಚಿನ ಆಘಾತಕಾರಿ ಬೆಳವಣಿಗೆ ಎಂದು ತಿವಿದಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಆರ್ಥಿಕತೆ ರೋಗಗ್ರಸ್ತವಾಗಿದೆ. ಆರ್‍ಬಿಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರ ವರೆಗೆ ಖ್ಯಾತ ಆರ್ಥಿಕ ತಜ್ಞರೆಲ್ಲರೂ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದಾರೆ. ಆಗಲೂ ಈಗಲೂ ಸರ್ಕಾರ ಕುರುಡು-ಕಿವುಡು.
2015ರಲ್ಲಿ ಜಿಡಿಪಿ ಅಂದಾಜು ಮಾಡುವ ಮೂಲವರ್ಷವನ್ನು 2004-05ರಿಂದ 2011-12ಕ್ಕೆ ಬದಲಾಯಿಸಲಾಯಿತು, ಅದರ ನಂತರ ಬಣ್ಣ ಬಯಲಾಗಬಾರದೆಂದು ಅಧಿಕೃತ ಅಂಕಿ ಅಂಶಗಳನ್ನೇ ತಡೆಹಿಡಿಯಲಾಯಿತು. ಈಗ ಎಲ್ಲವನ್ನು ಕೊರೊನಾ ಲೆಕ್ಕಕ್ಕೆ ಬರೆದು ಕೈತೊಳೆದುಕೊಳ್ಳಲು ಮೋದಿ ಹೊರಟಿದ್ದಾರೆ.
ಕೊರೊನಾ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದ್ದ ನರೇಂದ್ರ ಮೋದಿ ಅವರು ಜನರಿಗೆ ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳಿರುವುದು ಕೊರೊನಾ ಮಾರಿಯನ್ನು ಸರ್ಕಾರ ಎಷ್ಟು ಗಂಭೀರವಾಗಿದೆ ಎನ್ನುವುದಕ್ಕೆ ಸಾಕ್ಷಿ. ಈಗ ರೋದಿಸಿ ಏನು ಫಲ ಎಂದು ಪ್ರಶ್ನಿಸಿದ್ದಾರೆ.
ಲಾಕ್ ಡೌನ್ ಅಗತ್ಯವಿತ್ತು ನಿಜ, ನಮ್ಮ ಪಕ್ಷ ಕೂಡಾ ಬೆಂಬಲಿಸಿತ್ತು.ಆದರೆ ಅವೈಜ್ಞಾನಿಕವಾಗಿ, ದಿನಕ್ಕೊಂದು ರೀತಿಯ ಅನಿಶ್ಚಿತ ನಿರ್ಧಾರಗಳ ಮೂಲಕ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮವಾಗಿ ಲಾಭವಾಗಲಿಲ್ಲ, ನಷ್ಟವಾಗಿದ್ದೇ ಹೆಚ್ಚು. ಇದರ ಪೂರ್ಣ ಹೊಣೆಯನ್ನು ಪ್ರಧಾನಿಗಳೇ ವಹಿಸಿಕೊಳ್ಳಬೇಕಾಗುತ್ತದೆ.
ದೇಶ ಎದುರಿಸುತ್ತಿರುವ ಈಗಿನ ಆರ್ಥಿಕ ದುಸ್ಥಿತಿಗೆ ನೋಟು ರದ್ದತಿ, ದೋಷಪೂರಿತ ಜಿಎಸ್ ಟಿಯ ಅವೈಜ್ಞಾನಿಕ ಜಾರಿ ಮತ್ತು ಕೆಲಸವೇ ಗೊತ್ತಿಲ್ಲದ ಅಡ್ಡಕಸುಬಿ ಸಚಿವರು ಕೂಡಾ ಕಾರಣ ಎಂದು ನರೇಂದ್ರ ಮೋದಿ ಅವರು ದೇಶದ ಮುಂದೆ ಮೊದಲು ತಪ್ಪೊಪ್ಪಿಕೊಳ್ಳಬೇಕು.
ಸಂಕಟ-ಸಂಕಷ್ಟಗಳನ್ನು ಎದುರಿಸಿ ಗೆದ್ದುಬರುವವನೇ ನಿಜವಾದ ನಾಯಕ.ಪಂಡಿತ ಜವಾಹರಲಾಲ ನೆಹರೂ ಅವರಿಂದ ಮನಮೋಹನ್ ಸಿಂಗ್ ವರೆಗೆ ಎಲ್ಲ ಪ್ರಧಾನಿಗಳು ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಿ ಗೆದ್ದವರು. ನರೇಂದ್ರ ಮೋದಿ ಅವರಂತಹ ಕೈಲಾಗದ ವಿಫಲ ನಾಯಕರು ಮಾತ್ರ ನೆಪಗಳ ಮೊರೆ ಹೋಗುತ್ತಾರೆ ಎಂದು ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.








