ಬೆಂಗಳೂರು : ಮಾರ್ಚ್ ನಲ್ಲಿ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ರಮೇಶ್ ಬಾಬು ಅವರು ಕಾಂಗ್ರೆಸ್ ಬಾವುಟ ಹಿಡಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, 60 ಹಿರಿಯ ನಾಯಕರು ಪಕ್ಷಕ್ಕೆ ಸೇರುತ್ತೇನೆ ಎಂದು ಅರ್ಜಿ ಹಾಕಿದ್ದಾರೆ.
ಇದಕ್ಕೆ ಒಂದು ಸಮಿತಿ ರಚನೆ ಮಾಡಿದ್ದೇವೆ. ಸಮಿತಿ ಮುಂದೆ 60 ಅರ್ಜಿ ಬಂದಿದೆ. ಎಲ್ಲವೂ ಪರಿಶೀಲನೆ ಮಾಡಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ.

ರಮೇಶ್ ಬಾಬು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆಂದು ಅರ್ಜಿ ಹಾಕಿದ್ದರು. ಸದ್ಯ ವಿಧಾನಪರಿಷತ್ ಚುನಾವಣೆ ಬರೋದ್ರಿಂದ ರಮೇಶ್ ಬಾಬು ಕಾಂಗ್ರೆಸ್ ಸೇರ್ಪಡೆಗೆ ನಾವು ಒಪ್ಪಿಕೊಂಡೆವು. ಹೀಗಾಗಿ ಇಂದು ಅಧಿಕೃತವಾಗಿ ರಮೇಶ್ ಬಾಬು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ರಮೆಶ್ ಬಾಬು ಆಗ್ನೇಯ ಪದವೀಧರರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದ ವರಿಷ್ಠ ದೇವೇಗೌಡರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು.








