ಬೆಂಗಳೂರು : ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ರೈತರು ಸಮರ ಸಾರಿದ್ದಾರೆ.
ಇಂದು ಅಧಿವೇಶನ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿರುವ ಅನ್ನದಾತರು ಸರ್ಕಾರಗಳ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.
ರೈತ ಕಾರ್ಮಿಕ,ದಲಿತ ಸಂಘಟನೆ ಸೇರಿದಂತೆ 30ಕ್ಕೂ ಹೆಚ್ಚು ಸಂಘಟನೆಗಳಿಂದ ನಗರದಲ್ಲಿ ಬೃಹತ್ ರ್ಯಾಲಿ ಆರಂಭಿಸಲಾಗಿದೆ.
ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ಸುಮಾರು ಒಂದೂವರೆ ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ.
ರಾಜ್ಯ ಕಬ್ಬು ಬೆಳೆಗಾರರ ಸಂಘ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ಮತ್ತು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ವಿವಿಧ ಸಂಘಟನೆಗಳ ಬ್ಯಾನರ್ ಹಿಡಿದುಕೊಂಡಿರುವ ರೈತರ ಅಧಿವೇಶನ ಮುಗಿಯುವರೆಗೂ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.
ಮೆಜೆಸ್ಟಿಕ್ ನಿಂದ ಫ್ರೀಡಂ ಪಾರ್ಕಿನವರೆಗೂ ರೈತರು ರ್ಯಾಲಿ ಹೊರಟ್ಟಿದ್ದು, ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
ರೈತರ ಪ್ರತಿಭಟನೆ ಹಿನ್ನೆಲೆ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ 500ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಿದೆ.








