ಬೆಳಗಾವಿ : ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಮಸೂದೆಗಳನ್ನು ಜಾರಿಗೊಳಿಸಿವೆ.
ಹೀಗಾಗಿ, ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ದೇಶದೆಲ್ಲೆಡೆ ದೊಡ್ಡ ಆಂದೋಲನವೇ ನಡೆಯುತ್ತಿದೆ ಎಂದು ಹೇಳಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗಳ ವಿರುದ್ಧ ದೇಶದೆಲ್ಲೆಡೆ ದೊಡ್ಡ ಆಂದೋಲನ ನಡೆಯುತ್ತಿದೆ.
ನಾವು ಕೂಡ ರೈತರ ಜೊತೆಗಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ಕೊರೊನಾ ಬಗ್ಗೆ ಮಾತನಾಡಿದ ಸತೀಶ್, ಮಹಾಮಾರಿ ಕೊರೊನಾ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರಗಳು ವಿಫಲವಾಗಿವೆ.
ಸಮರ್ಪಕ ಕೆಲಸ ಎರಡೂ ಸರ್ಕಾರಗಳಿಂದ ಆಗುತ್ತಿಲ್ಲ. ಈ ಬಗ್ಗೆ ಹಲವು ಸಲ ಸರ್ಕಾರದ ಗಮನ ಸೆಳೆದಿದ್ದೇವೆ.
ದೇಶದಲ್ಲಿ ಕೊರೊನಾ ಕೈಮೀರಿ ಹೋಗುತ್ತಿದೆ. ಇನ್ನಾದರೂ ಸರ್ಕಾರ ಜಾಗೃತಗೊಳ್ಳಬೇಕು ಎಂದು ಆಗ್ರಹಿಸಿದರು.








