ಬೆಂಗಳೂರು: ಮುಂಬರುವ ಶಿರಾ ಕ್ಷೇತ್ರದ ಉಪಚುನಾವಣೆ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ಮತ್ತು ಸದಸ್ಯತ್ವ ಅಭಿಯಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಕಾರ್ಯತಂತ್ರ ರೂಪಿಸಲು ಇಂದು ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನೂತನ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಶಾಸಕರು, ಸಂಸದರು, ಎಂಎಲ್ಸಿಗಳು ಹಾಗೂ ಹಿರಿಯ ಮುಖಂಡರು, ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಉದ್ದೇಶದಿಂದ ಮುಂದೆ ಕೈಗೊಳ್ಳಬೇಕಾದ ಕ್ರಮಗಳು, ಕಾರ್ಯಕ್ರಮಗಳ ಬಗ್ಗೆ ಹಿರಿಯ ನಾಯಕರ ಜೊತೆ ಚರ್ಚೆ ನಡೆಯಲಿದೆ.
ಇದೇ ವೇಳೆ, ಶೀಘ್ರವೇ ಹೊಸ ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಬಗ್ಗೆಯೂ ಈ ಸಭೆಯಲ್ಲಿ ಮಾತುಕತೆ ನಡೆಯುವ ಸಾಧ್ಯತೆ ಇದೆ.
ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ವಿರುದ್ಧ ನಾಳೆ ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ರೈತರ ಪ್ರತಿಭಟನೆಗೆ ಕಾಂಗ್ರೆಸ್ ಈಗಾಗಲೇ ಬೆಂಬಲ ಘೋಷಣೆ ಮಾಡಿದೆ. ನಾಳಿನ ಬಂದ್ ಅಂಗವಾಗಿ ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.








