ಬೆಂಗಳೂರು: ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ರಾಜಧಾನಿ ಬೆಂಗಳೂರು ಸಂಪೂರ್ಣ ಸ್ತಬ್ದಗೊಂಡಿದೆ.
ರೈತ ಸಂಘ, ಹಸಿರು ಸೇನೆ, ವಾಟಾಳ್ ನಾಗರಾಜ್ ನೇತೃತ್ವದ ವಾಟಾಳ್ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ನೂರಾರು ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೆಂಗಳೂರಿನ ವಿವಿಧ ಭಾಗಗಳಿಂದ ಟೌನ್‍ಹಾಲ್ ಮುಂದೆ ಜಮಾಯಿಸಿದರು. ಟೌನ್‍ಹಾಲ್ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಬಳಿಕ ಪ್ರತಿಭಟನಾಕಾರರು, ಮೈಸೂರು ಬ್ಯಾಂಕ್ ಮೂಲಕ ಫ್ರೀಡಂಪಾರ್ಕ್‍ನಲ್ಲಿ ಸಮಾವೇಶಗೊಂಡರು. ಫ್ರೀಡಂಪಾರ್ಕ್‍ನಲ್ಲಿ ಸಮಾವೇಶಗೊಂಡ ಸಾವಿರಾರು ಪ್ರತಿಭಟನಾಕಾರರಿಗೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಕನ್ನಡ ಸಂಘಟನೆಗಳ ಕೆಲ ಕಾರ್ಯಕರ್ತರು ಸರ್ಕಾರದ ವಿರುದ್ಧ ಅರೆಬೆತ್ತಲೆ ಹೋರಾಟ ನಡೆಸಿದರೆ, ಕೆಲ ಸಂಘಟನೆಗಳ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ವಾಟಾಳ್ ನಾಗರಾಜ್ ಕತ್ತೆ ಮೇಲೆ ಸವಾರಿ ಮಾಡುವ ಮೂಲಕ ರೈತ ವಿರೋಧಿ ಕಾನೂನುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದರಿಂದ ಮೆಜೆಸ್ಟಿಕ್ ರಸ್ತೆ, ಚಿಕ್ಕಪೇಟೆ ರಸ್ತೆ, ಸಿಟಿ ಸಿವಿಲ್ ಕೋರ್ಟ್ ಕಡೆ ತೆರಳುವ ರಸ್ತೆಗಳು ಸಂಪೂರ್ಣ ಬಂದ್ ಆಗಿದ್ದವು.