ಬೆಂಗಳೂರು: ವಿಶ್ವದಾದ್ಯಂತ ಕೊರೊನಾ ವೈರಸ್ ಮರಣ ಮೃದಂಗ ಬಾರಿಸುತ್ತಿದ್ದು, ರಾಜ್ಯದಲ್ಲೂ ಕೊರೊನಾ ಮೊದಲ ಬಲಿ ಪಡೆದುಕೊಂಡಿದೆ. ಈ ನಡುವೆ ಕೊರೊನಾ ವಿಚಾರ ಪ್ರಚಾರ ಪಡೆಯುವ ಪ್ರಹಸನವಾಗದೇ ಜನರ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಸರ್ಕಾರ ಕಾರ್ಯ ನಿರ್ವಹಿಸಬೇಕೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಟಿ ಬೀಸಿದ್ದಾರೆ.
ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಗಳ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹೆಚ್ ಡಿಕೆ, ಕೆಲವು ಸಲಹೆಗಳನ್ನು ನೀಡಿದ್ದಾರೆ.”
ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ.ಆದರೆ ಇತರ ರೋಗಿಗಳ ಜೊತೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.
ಖಾಲಿ ಸರ್ಕಾರಿ ಕಟ್ಟಡಗಳನ್ನು ಬಳಸಿ
ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ ಇಂತಹ ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು ಎಂದು ಹೆಚ್ ಡಿಕೆ ತಿಳಿಸಿದ್ದಾರೆ.
ಹಾಗೇ ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಜನರಲ್ಲಿ ಗೊಂದಲ ಮೂಡದಿರಲಿ
ಕೊರೊನಾ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದಾರೆ.









