ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟಿದ್ದು. ಯಾವ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಬೇಡ ಎನ್ನುವ ಮುಖ್ಯಮಂತ್ರಿಗಳ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಯಾವ ಸಚಿವರನ್ನು ಸಂಪುಟದಿಂದ ಕೈಬಿಟ್ಟರೂ ಇದಕ್ಕೆ ಯಾವುದೇ ಆಕ್ಷೇಪವಿಲ್ಲ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪಕ್ಷದ ನಾಯಕತ್ವ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದ್ಧರಾಗಿದ್ದೇವೆ ಎಂದು ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಪಕ್ಷದಲ್ಲಿ ಸಂಭವಿಸಲಿರುವ ಬಿರುಕುಗಳನ್ನು ತಪ್ಪಿಸಲು ಪಕ್ಷದ ನಾಯಕತ್ವವು ಈ ಬಾರಿ ಕೆಲ ಹೊಸ ಶಾಸಕರಿಗೆ ಅವಕಾಶ ಕಲ್ಪಿಸಲು ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.