ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ ಪಕ್ಷದ ಸಾರಥ್ಯ ವಹಿಸಿದ ನಂತರದಲ್ಲಿ ದಣಿವರೆಯದೆ ಮುನ್ನುಗುತ್ತಿದ್ದಾರೆ. ಅಲ್ಲದೆ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮುಖ್ಯ ಎನ್ನುವ ಡಿಕೆಶಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ತಂತ್ರ ಎಣೆದಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ನ ಹಿರಿಯ ನಾಯಕರನ್ನು ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸುತ್ತಿದ್ದಾರೆ.
ಇಂದೂ ಸಹ ಮಾಜಿ ಸಚಿವ ಎಂ.ಬಿ ಪಾಟೀಲ್ ಅವರನ್ನು ಭೇಟಿ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಂ.ಬಿ ಪಾಟೀಲ್ ಪ್ರಬಲ ಪೈಪೋಟಿ ನೀಡಿದ್ದರು. ಅಲ್ಲದೆ ಮಾಜಿ ಸಿ.ಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ ಸಾಮೂಹಿಕ ನಾಯಕತ್ವ ಮುಖ್ಯ ಎಂಬ ಸಂದೇಶವನ್ನು ಪ್ರಾರಂಭದಲ್ಲೆ ಸಾರುತ್ತಿದ್ದಾರೆ.
ಒಂದೆಡೆ ನಾಯಕ ಭೇಟಿ, ಮತ್ತೊಂದೆಡೆ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಶ್ರೀ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ ಅವರ ಜೊತೆಗೆ ಇಂದು ಸಭೆ ನಡೆಸುತ್ತಿದ್ದಾರೆ. ಡಿ.ಕೆ. ಶಿವಕುಮಾರ ಅವರು ಕೆಪಿಸಿಸಿ ಅಧ್ಯಕ್ಷ ಗಾದಿಗೆ ಏರಿದ ನಂತರ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಸಭೆಯಲ್ಲಿ ಪಕ್ಷವನ್ನು ಕಟ್ಟಲು ತಂತ್ರಗಳನ್ನು ರೂಪಿಸುವ ಸಾಧ್ಯತೆಗಳಿವೆ. ಸಭೆ ಬಳಿಕ ನಾಯಕರು ಕಾಂಗ್ರೆಸ್ ಕಚೇರಿಯಲ್ಲೆ ಉಳಿದು ಕಾರ್ಯಕರ್ತರನ್ನು ಭೇಟಿ ಮಾಡಲು ಮುಂದಾಗಿದ್ದಾರೆ.









