ಬೆಂಗಳೂರು: ನವೆಂಬರ್ 3ರಂದು ನಡೆಯಲಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಕೊನೆಗೂ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ(BJP ticket) ಪ್ರಕಟಿಸಿದೆ.
ಆರ್.ಆರ್ ನಗರ ಕ್ಷೇತ್ರದಿಂದ ಅನರ್ಹ ಶಾಸಕ ಮುನಿರತ್ನ ಹಾಗೂ ಶಿರಾ ಕ್ಷೇತ್ರದಿಂದ ಡಾ.ರಾಜೇಶ್ ಗೌಡ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಿರ್ದೇಶನದ ಮೇರೆಗೆ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಈ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ಆರ್.ಆರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಮುನಿರತ್ನ ವಿರುದ್ಧ ಬಿಜೆಪಿ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಅರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ತುಳಸಿ ಮುನಿರಾಜುಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್ ಕೂಡ ಇಂದು ತುಳಸಿ ಮುನಿರಾಜು ಅರ್ಜಿ ವಜಾಗೊಳಿಸಿ ಚುನಾವಣೆಗೆ ಗ್ರೀನ್‍ಸಿಗ್ನಲ್ ನೀಡಿದೆ.

ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕೊನೆಗೂ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಮುನಿರತ್ನ ನಾಳೆ(ಬುಧವಾರ) ಬೆಳಗ್ಗೆ 11ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಇದೇ ವೇಳೆ ಶಿರಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಬಿಜೆಪಿ ಪಾಲಿಗೆ ಗೊಂದಲದ ಗೂಡಾಗಿತ್ತು. ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಡಾ.ರಾಜೇಶ್ ಗೌಡ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ.
ನಾಳೆ ಕುಸುಮಾ ನಾಮಪತ್ರ ಸಲ್ಲಿಕೆ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ರಾಜರಾಜೇಶ್ವರಿನಗರ ಬಿಬಿಎಂಪಿ ಕಚೇರಿಯಲ್ಲಿ ಬೆಳಗ್ಗೆ 11.45ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕುಸುಮಾ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








