ಮೂರು ಚುನಾವಣೆಗಳಲ್ಲಿ ಹ್ಯಾಟ್ರಿಕ್ ಸೋಲು ಕಂಡಿರುವ ಮಧುಬಂಗಾರಪ್ಪ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇತ್ತೀಚೆಗಷ್ಟೆ ಸುದ್ದಿಗೋಷ್ಟಿ ನಡೆಸಿ ಪಕ್ಷದ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಇದಕ್ಕೆ ಸಾಕ್ಷಿಯಾಗಿದೆ. ಇವುಗಳ ಮಧ್ಯೆ ಮಧುಬಂಗಾರಪ್ಪ ಜೆಡಿಎಸ್ ಗೆ ರಾಜೀನಾಮೆ ನೀಡುತ್ತಾರೆ ಎನ್ನುವುದು ಪಕ್ಕಾ ಆಗಿದ್ದು, ಯಾವ ಪಕ್ಷ ಸೇರುತ್ತಾರೆ ಎಂಬುದು ಸ್ಪಷ್ಟವಾಗಿರಲಿಲ್ಲ. ಇದೀಗ ಅದಕ್ಕೆ ಉತ್ತರ ಸಿಕ್ಕಿದ್ದು, ಮಧು ಬಂಗಾರಪ್ಪ ಯುಗಾದಿ ಬಳಿಕ ಕಾಂಗ್ರೆಸ್ ಸೇರಲಿದ್ದಾರಂತೆ.
ಮಾಜಿ ಸಿಎಂ ಸಿದ್ದರಾಮಯ್ಯ ಆಹ್ವಾನ!
ಮೊದಲಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ, ಎರಡನೆಯದಾಗಿ 2018 ರ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಮೂರನೆಯದಾಗಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧಿಸಿ ಮಧು ಬಂಗಾರಪ್ಪ ಪರಾಭವಗೊಂಡಿದ್ದಾರೆ. ಹೀಗೆ ಸಾಲು ಸಾಲು ಸೋಲನುಭವಿಸಿದ ಮಧು ಬಂಗಾರಪ್ಪಗೆ ಸಿದ್ದರಾಮಯ್ಯ ಆಹ್ವಾನ ನೀಡಿದ್ದು, ಅದನ್ನು ಒಪ್ಪಿ ಯುಗಾದಿ ಬಳಿಕ ಕಾಂಗ್ರೆಸ್ ಸೇರಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಶಿವಮೊಗ್ಗದಲ್ಲಿ ಸಿದ್ಧತೆ !
ಮಧು ಬಂಗಾರಪ್ಪ ಅವರು ಸಿದ್ದರಾಮಯ್ಯ ಆಹ್ವಾನದಂತೆ ಕಾಂಗ್ರೆಸ್ ಗೆ ಸೇರಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಶಿವಮೊಗ್ಗದಲ್ಲಿ ಸಾವಿರಾರು ಜನರನ್ನು ಸೇರಿಸಿ, ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರಲು ಮಧುಬಂಗಾರಪ್ಪ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದಾರಂತೆ. ಇದಕ್ಕೆ ಸಿದ್ದರಾಮಯ್ಯ ಹಾಗೂ ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಬ್ಬರೂ ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.









