ಧಾರವಾಡ: ಜಿಲ್ಲಾಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ್ದಾರೆ. ನಾಳೆ ಸಂಜೆವರೆಗೆ ಒಂದು ದಿನಗಳ ಕಾಲ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಧಾರವಾಡ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ.
ಇಂದು ಬೆಳಿಗ್ಗೆ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದ್ದರು. ಸತತ 9 ಗಂಟೆಗಳ ಕಾಲ ನಡೆದ ವಿಚಾರಣೆ ಬಳಿಕ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಯಿತು. ವಿನಯ್ ಕುಲಕರ್ಣಿ ಅವರನ್ನು ಬಂಧಿಸುತ್ತಿದ್ದಂತೆ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಹಾಗೂ ಕೊರೊನಾ ಪರೀಕ್ಷೆ ನಡೆಸಲಾಯಿತು.
ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ವಿನಯ್ ಕುಲಕರ್ಣಿ ಅವರನ್ನು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಕಷ್ಟಡಿಗೆ ನೀಡುವಂತೆ ಸಿಬಿಐ ಪರ ವಕೀಲರು ಕೋರ್ಟ್‍ಗೆ ಮನವಿ ಮಾಡಿದರು. ಎರಡೂ ಕಡೆಗಳ ವಾದ ಆಲಿಸಿದ ನ್ಯಾಯಾಧೀಶರು ವಿನಯ್ ಕುಲಕರ್ಣಿ ಅವರನ್ನು ನಾಳೆ ಸಂಜೆವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.
ನಾಳೆ ಸಂಜೆ ನ್ಯಾಯಾಂಗ ಬಂಧನ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಳೆ ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವುದಾಗಿ ನ್ಯಾಯಾಧೀಶರಾದ ಹೆಚ್. ಪಂಚಾಕ್ಷರಿ ಆದೇಶದ ವೇಳೆ ತಿಳಿಸಿದ್ದಾರೆ.
ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿಚಾರಣೆ ನಡೆಯುತ್ತಿದ್ದ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಹೈಡ್ರಾಮ ನಡೆಸಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ ಎನ್ನಲಾಗಿದೆ.
ಇಂದು ಬೆಳಿಗ್ಗೆ 6 ಮಂದಿ ಸಿಬಿಐ ಅಧಿಕಾರಿಗಳ ತಂಡ, ಧಾರವಾಡದ ಬರಕೊಟ್ರಿಯಲ್ಲಿ ನಿವಾಸಕ್ಕೆ ದಾಳಿ ಮಾಡಿ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದ್ದರು.
ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಇಡೀ ದಿನ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದರು. ನಂತರ ವೈದ್ಯಕೀಯ ಪರೀಕ್ಷೆ ನಡೆಸಿ ಕೋರ್ಟ್‍ಗೆ ಹಾಜರುಪಡಿಸಿದ್ದರು.
2016ರ ಜೂನ್ 15ರಂದು ಯೋಗೇಶ್ ಗೌಡ ಅವರನ್ನು ಸತ್ತಾಪುರದ ಜಿಮ್ ಎದುರು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದ್ದರು. ಹತ್ಯೆಯ ದೃಶ್ಯವು ಜಿಮ್‍ನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಆಪ್ತರಾದ ಐವರನ್ನು ಧಾರವಾಡ ಪೊಲೀಸರು ಬಂಧಿಸಿದ್ದರು.
ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಹೆಸರು ಕೇಳಿ ಬಂದಿತ್ತು. ನಂತರ ಆರೋಪಿಗಳು ಯೋಗೇಶ್ ಗೌಡನ ಸಹೋದರ ಜತೆ ರಾಜಿ ಮಾಡಿಕೊಳ್ಳಲು ಯತ್ನಿಸಿದ್ದರು. ಮತ್ತೊಂದೆಡೆ ವಿನಯ್ ಕುಲಕರ್ಣಿ ರಕ್ಷಣೆಗೆ ಅಧಿಕಾರಿಗಳು ನಿಂತಿದ್ದಾರೆ ಎಂದು ಯೋಗೇಶ್‍ಗೌಡ ತಾಯಿ ಆರೋಪಿಸಿದ್ದರು.
ರಾಜ್ಯ ಸರ್ಕಾರ ಕಳೆದ ವರ್ಷದ ಸೆಪ್ಟೆಂಬರ್ 9ರಂದು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಪ್ರಕರಣ ದಾಖಲಿಸಿಕೊಂಡ ಸಿಬಿಐ ಅಧಿಕಾರಿಗಳು, ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ್ ಹೊನಗಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel