=============ಮರಾಠ ಅಭಿವೃದ್ಧಿ ಪ್ರಾಧಿಕಾರ ಅಲ್ಲ, ಸಮುದಾಯ ನಿಗಮ========
ಬೆಂಗಳೂರು: ರಾಜ್ಯದ 31ನೇ ಹೊಸ ಜಿಲ್ಲೆಯಾಗಿ ವಿಜಯನಗರ ಶೀಘ್ರದಲ್ಲೇ ಜನ್ಮ ತಾಳಲಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನೂತನ ವಿಜಯನಗರ ಜಿಲ್ಲೆ ರಚನೆಗೆ ತಾತ್ವಿಕ ಅನುಮೋದನೆ ಸಿಕ್ಕಿದೆ.
ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದ್ದು, ಮುಂದಿನ ಸಭೆಯಲ್ಲಿ ಅಧಿಕೃತ ಅನುಮೋದನೆ ಸಿಗಲಿದೆ. ಜಿಲ್ಲೆಯ ರಚನೆ ಸಂಬಂಧ ಪ್ರಕ್ರಿಯೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲೇ ಚಳಿಗಾಲ ಅಧಿವೇಶನ
ಡಿಸೆಂಬರ್ 7ರಿಂದ 15ರವರೆಗೆ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಂಗಳೂರಲ್ಲಿ ನಡೆಯಲಿದೆ. ಪ್ರತಿವರ್ಷ ಚಳಿಗಾಲದ ಅಧಿವೇಶನವನ್ನು ರಾಜ್ಯದ ಎರಡನೇ ರಾಜಧಾನಿ ಬೆಳಗಾವಿಯಲ್ಲಿ ನಡೆಸಲಾಗುತ್ತಾ ಬರಲಾಗುತ್ತಿದೆ. ಆದರೆ, ಈ ವರ್ಷ ಹೆಮ್ಮಾರಿ ಕೊರೊನಾ ಅಟ್ಟಹಾಸ ಹಿನ್ನೆಲೆಯಲ್ಲಿ ಸಾವಿರಾರು ಸಿಬ್ಬಂದಿ, ಅಧಿಕಾರಿಗಳು ಬೆಳಗಾವಿಗೆ ತೆರಳಬೇಕು. ಸಿದ್ಧತೆಗಾಗಿ ಬೆಳಗಾವಿ ಬೆಂಗಳೂರಿಗೆ ನಿರಂತರ ಪ್ರಯಾಣ ಮಾಡಬೇಕು. ಕೊರೊನಾ ದಿನಗಳಾಗಿರುವುದರಿಂದ ಈ ವರ್ಷ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ಅಲ್ಲ, ಸಮುದಾಯ ನಿಗಮ
ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಾವಣೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಇನ್ನು ಮುಂದೆ `ಮರಾಠ ಸಮುದಾಯ ನಿಗಮ’ ಎಂದು ಬದಲಾವಣೆಯಾಗಲಿದೆ.
ಮರಾಠ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರಾಧಿಕಾರ ಮಾಡಬೇಕಾದರೆ ಕಾನೂನು ಮಾಡಬೇಕು. ಆದರೆ ನಿಗಮಕ್ಕೆ ಸರ್ಕಾರವೇ ನಿರ್ಧಾರ ಕೈಗೊಳ್ಳಬಹುದು. ಹಣ ಎಷ್ಟು ನಿಗಧಿ ಮಾಡಬೇಕು ಎಂಬುದು ಇನ್ನೂ ಚರ್ಚೆಯಾಗಿಲ್ಲ. ಒಂದು ಸಮುದಾಯದ ಅಭಿವೃದ್ಧಿ ವಿಷಯದಲ್ಲಿ ಯಾಕೆ ವಿರೋಧ ಮಾಡುತ್ತಿದ್ದಾರೋ ಗೊತ್ತಿಲ್ಲ. ಆದರೂ ಅಭಿವೃದ್ಧಿಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ 1000 ಕೋಟಿ ರೂ. ಬಿಡುಗಡೆ ಮಾಡಿ ಪರಿಹಾರ ಕಾಮಗಾರಿ ಕೈಗೊಳ್ಳಲು ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದರು.
ಎಸ್‍ಸಿ/ಎಸ್‍ಟಿ ಮೀಸಲಾತಿ ಹೆಚ್ಚಳ ಸಂಬಂಧ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗುತ್ತದೆ. ಒಂದು ವಾರದಲ್ಲಿ ಸಮಿತಿ ರಚನೆ ಮಾಡಲಾಗುತ್ತದೆ. ಸಮಿತಿ ವರದಿ ಆಧರಿಸಿ ಮೀಸಲು ಹೆಚ್ಚಳ ಮಾಡಲಾಗುತ್ತದೆ. ಉಪಸಮಿತಿ ರಚನೆ ಮಾಡಲು ಸಿಎಂಗೆ ಅಧಿಕಾರ ನೀಡಲಾಗುವುದು ಎಂದರು.
ಕೃಷ್ಣಾ ಭಾಗ್ಯ ಜಲ ನಿಗಮ, ಕಾವೇರಿ ಅಭಿವೃದ್ಧಿ ನಿಗಮ ಮತ್ತು ವಿಶ್ವೇಶ್ವರಯ್ಯ ಅಭಿವೃದ್ಧಿ ನಿಗಮಕ್ಕೆ ಸಾಲ ಪಡೆಯಲು ಅನುಮತಿ ನೀಡಲಾಗಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ 13 ಕೋಟಿ ಅಂದಾಜು ವೆಚ್ಚದಲ್ಕಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು.
2021ನೇ ಸಾಲಿನಲ್ಲಿ 21 ಸಾರ್ವತ್ರಿಕ ರಜೆ ಮತ್ತು19 ನಿಬರ್ಂಧಿತ ರಜೆ ನೀಡಲು ಅನುಮೋದನೆ ಸಿಕ್ಕಿದ್ದು, ಲೋಕಸೇವಾ ಆಯೋಗದ ಅನುಮತಿ ಇಲ್ಲದೆ ಸರ್ಕಾರಿ ನೌಕರರ ಮೇಲೆ ಕ್ರಮ ಕೈಗೊಳ್ಳಲು ನಿಯಮಾವಳಿ ತಿದ್ದುಪಡಿ ಮಾಡಲಾಗುತ್ತದೆ ಎಂದು ಸಚಿವ ಮಾಧುಸ್ವಾಮಿ ವಿವರ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel