ರಾಜ್ಯದಲ್ಲಿ ತುಂಬಾ ಕೆಲ್ಸ ಇದೆ, ಬೈ ಎಲೆಕ್ಷನ್ ಗೆ ಸ್ಪರ್ಧಿಸಲ್ಲ : ಸತೀಶ್ ಜಾರಕಿಹೊಳಿ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕರೂ ಕೂಡ ಸತೀಶ್ ಜಾರಕಿಹೊಳಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಈ ಬಗ್ಗೆ ಇದೀಗ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಡಿಸೆ0ಬರ್ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಈ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು.
ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ, ಮೂವರು ಅಭ್ಯರ್ಥಿಗಳ ಹೆಸರನ್ನು ಕೆಪಿಸಿಸಿಗೆ ಶಿಪಾರಸ್ಸು ಮಾಡಲಾಗುವದು ಎಂದು ತಿಳಿಸಿದರು.
ಇನ್ನು ಉಪಚುನಾವಣೆಗೆ ಸ್ಪರ್ಧಿಸುವ ವಿಚಾರ ಇಲ್ಲ. ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿಯೇ ಇನ್ನು ತುಂಬಾ ಕೆಲಸ ಮಾಡಬೇಕಾಗಿದೆ. ಆದರೆ ಉಪಚುನಾವಣೆಗೆ ನನ್ನ ಹೆಸರು ಕೇಳಿ ಬಂದಿದೆಯಷ್ಟೆ.
ಯಾವುದೂ ಅಂತಿಮ ಅಲ್ಲ. ಉಪಚುನಾವಣೆಗೆ ಸ್ಪರ್ಧಿಸಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ ಎಂದು ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದರು.
ಇದೇ ವೇಳೆ ಮರಾಠ ಅಭಿವೃದ್ಧಿ ಪ್ರಾಧಿಕಾರ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವ ಬಗ್ಗೆ ಮಾತನಾಡಿ, ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಬೆಂಬಲ ಇಲ್ಲ ಎಂದು ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.










