ಲಖನೌ: ಲಾಕ್ ಡೌನ್ ಹಿನ್ನೆಲೆ ದೇಶದ ವಿವಿಧ ಮೂಲೆಗಳಿಂದ ಉತ್ತರ ಪ್ರದೇಶಕ್ಕೆ ವಾಪಸಾದ ವಲಸೆ ಕಾರ್ಮಿಕರ ಮೇಲೆ ಸೋಂಕು ನಿವಾರಕ ರಾಸಾಯನಿಕ ಸಿಂಪಡಿಸಲಾಗಿದೆ ಎಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಯೋಗಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವಿಟ್ವರ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಿಯಾಂಕಾ,’ಈ ದುರಂತದ (ಕೊರೊನಾ/ಕೋವಿಡ್-19) ವಿರುದ್ಧ ನಾವೆಲ್ಲರೂ ಜತೆಯಾಗಿ ಹೋರಾಡುತ್ತಿದ್ದೇವೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಆದರೆ, ದಯವಿಟ್ಟು ಇಂತಹ ಅಮಾನವೀಯ ಕೆಲಸಗಳನ್ನು ಮಾಡಬೇಡಿ. ವಲಸೆ ಕಾರ್ಮಿಕರು ಈಗಾಗಲೇ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅವರ ಮೇಲೆ ರಾಸಾಯನಿಕ ಸಿಂಪಡಿಸುವ ಮೂಲಕ ಅವರನ್ನು ಈ ರೀತಿ ನಡೆಸಿಕೊಳ್ಳಬೇಡಿ. ಇದು ಅವರನ್ನು ರಕ್ಷಿಸುವುದಿಲ್ಲ, ಬದಲಿಗೆ ಅವರ ಆರೋಗ್ಯಕ್ಕೆ ಹೆಚ್ಚಿನ ಹಾನಿ ಉಂಟು ಮಾಡುತ್ತದೆ’ ಎಂದು ಬರೆದುಕೊಂಡಿದ್ದಾರೆ.
ಇನ್ನು ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದಾದ್ಯಂತ 21 ದಿನಗಳ ಲಾಕ್ಡೌನ್ ಘೋಷಿಸಿದ್ದಾರೆ.