ಚಿತ್ರದುರ್ಗ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುತ್ತಲೇ ಇರುತ್ತಾರೆ, ಹೀಗಾಗಿ ಯತ್ನಾಳ್ ಏಕೋಪಾದ್ಯಾಯ ಶಿಕ್ಷಕರಾಗಲು ಸಾಧ್ಯವಿಲ್ಲ ಎನ್ನುವ ಮೂಲಕ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡ ಕಿಡಿಕಾರಿದ್ದಾರೆ.
ಚಿತ್ರದುರ್ಗದಲ್ಲಿ ಶಾಸಕ ಜಿಹೆಚ್ ತಿಪ್ಪಾರೆಡ್ಡಿ ನಿವಾಸಕ್ಕೆ ಭೇಟಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ. ಪಕ್ಷ ಅಧಿಕಾರಕ್ಕೆ ಬರಲು ಕಾರಣರಾದವರಿಗೆ ಸಚಿವ ಸ್ಥಾನ ಕೊಡಬೇಕಿದೆ. ಹೀಗಾಗಿ ಹಲವಾರು ಬಾರಿ ಆಯ್ಕೆಯಾಗಿರುವ ಶಾಸಕರಿಗೆ ಸಚಿವ ಸ್ಥಾನ ಕೊಡಲು ಆಗಿಲ್ಲ. ಬಿಜೆಪಿ ಜೊತೆ ಜೆಡಿಎಸ್ ವಿಲೀನದ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ದೇಶದಲ್ಲಿ ಭಾರೀ ಬದಲಾವಣೆ ಆಗಿದೆ. ಇಡೀ ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮಮತಾ ಬ್ಯಾನರ್ಜಿ ಅವರ ಕಪಿಮುಷ್ಠಿಯಲ್ಲಿದ್ದ ಪಶ್ಚಿಮ ಬಂಗಾಳದಲ್ಲಿ ಮುಂದೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಡಿವಿಎಸ್, ದೇಶದ ಎಲ್ಲಾ ರಾಜ್ಯಗಳ ಜನರು ಇತರೆ ರಾಜಕೀಯ ಪಕ್ಷಗಳನ್ನು ದೂರ ಇಡುತ್ತಿದ್ದಾರೆ. ನಮ್ಮ ಸರ್ಕಾರ ಕೊಟ್ಟ ಆಡಳಿದದಿಂದಾಗಿ ದೇಶದಲ್ಲಿ ಬಿಜೆಪಿ ಅಲೆ ಮತ್ತಷ್ಟು ಹೆಚ್ಚಾಗಿದೆ ಎಂದರು.
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ರೈತರ ಪರವಾಗಿದೆ, ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಕೊಟ್ಟಿದ್ದೇವೆ. ರೈತರು ತಮ್ಮ ಉತ್ಪಾದನೆಯನ್ನು ಎಲ್ಲಿ ಬೇಕಾದರೂ ಮಾರಟ ಮಾಡಲು ಅವಕಾಶ ಕೊಟ್ಟಿದ್ದೇವೆ. ಆದರೆ ಕೆಲವರು ರೈತರಿಗೆ ಅನುಕೂಲಕರವಾದ ಕಾನೂನಿನ ಬಗ್ಗೆ ದಾರಿ ತಪ್ಪಿಸುತ್ತಿದ್ದಾರೆ.
65 ಸಾವಿರ ಕೋಟಿ ರೂ ಹಣವನ್ನು ರಸಗೊಬ್ಬರ ಸಬ್ಸಿಡಿಗೆ ಮೀಸಲಿಟ್ಟಿದ್ದೇವೆ. ರೈತರ ಮುಖವಾಡ ಹಾಕಿಕೊಂಡು ನಮ್ಮ ವಿರೋಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel